ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 19 ಮತ್ತು 20ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಬಾಕಿಯಿದ್ದ 115 ಪ್ರಕರಣಗಳ ವಿಚಾರಣೆ ನಡೆಸಲಾಗಿದೆ. ಈ ಪೈಕಿ 80 ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗಿದ್ದು, ಉಳಿದ 35 ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅರ್ಜಿದಾರರ ದೂರುಗಳನ್ನು ಕಾನೂನಿನನ್ವಯ ಶೀಘ್ರವಾಗಿ ಪರಿಶೀಲಿಸಿ, ಅರ್ಜಿಗಳನ್ನು ವಿಲೇವಾರಿ ಮಾಡಿ ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರ ಕೆಲಸಗಳನ್ನು ನಿಗದಿತ ಕಾಲಮಿತಿಯೊಳಗೆ ನಿರ್ವಹಿಸಬೇಕು. ನಿಗದಿತ ಅವಧಿಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡದಿದ್ದಲ್ಲಿ, ನಿಖರ ಹಾಗೂ ಸ್ಪಷ್ಟತೆಯಿಂದ ಪೂರಕ ದಾಖಲೆಗಳೊಂದಿಗೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು. ತಮ್ಮ ಪ್ರವಾಸದ ಸಂದರ್ಭದಲ್ಲಿ ಲೋಕಾಯುಕ್ತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಗರದ ವಿವಿಧ ಸರ್ಕಾರಿ ಕಚೇರಿಗಳು, ವಸತಿ ನಿಲಯಗಳು ಮತ್ತು ಸಾರ್ವಜನಿಕ ಸೌಲಭ್ಯಗಳ ಸ್ಥಳಗಳಿಗೆ ಭೇಟಿ ನೀಡಿ ಸ್ವಚ್ಛತೆ, ಮೂಲಸೌಕರ್ಯ ಹಾಗೂ ನಿರ್ವಹಣೆಯನ್ನು ಪರಿಶೀಲಿಸಲಾಗಿದೆ. ಈ ವೇಳೆ ಕಂಡುಬಂದ ಲೋಪದೋಷಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಗಿದೆ. ನವೆಂಬರ್ 19ರಂದು ಅಫಜಲಪುರ ಟಕ್ಕೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಾದ ಹೆಚ್‌ಬಿಸಿ-2515, ಹೆಚ್‌ಬಿಸಿ-2518 ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ನವೆಂಬರ್ 20ರಂದು ನಗರದ ಕಸ ವಿಲೇವಾರಿ ಘಟಕ, ಕೇಂದ್ರ ಬಸ್ ನಿಲ್ದಾಣ, ಜಿಲ್ಲಾ ಪಂಚಾಯತ್ ಸಮೀಪದ ಬಾಲಕರ ಮತ್ತು ಬಾಲಕಿಯರ ಬಾಲಮಂದಿರ ಹಾಗೂ ಹಿರಿಯ ನಾಗರಿಕರ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಗಿದೆ. ಪ್ರವಾಸದ ಕೊನೆಯ ದಿನವಾದ ನವೆಂಬರ್ 21ರಂದು ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಸಕರ ಮಾದರಿ ಪ್ರಾಥಮಿಕ ಶಾಲೆ ಸಂಖ್ಯೆ 24, ಸಹಾಯಕ ನಿರ್ದೇಶಕರ ಭೂ ದಾಖಲೆಗಳ ಕಚೇರಿ, ಉಪನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆ ಕಚೇರಿ, ಸೆಟಲೈಟ್ ಬಸ್ ನಿಲ್ದಾಣ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾವಿ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ ಪಾಟೀಲ, ಸಿಪಿಐ ಆನಂದ ಟಕ್ಕಣ್ಣವರ ಸೇರಿದಂತೆ ಕರ್ನಾಟಕ ಲೋಕಾಯುಕ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.