ಶಿರಸಿ-ಕುಮಟಾ ರಸ್ತೆ ಶೀಘ್ರ ಪೂರ್ಣಗೊಳಿಸಿ: ಸುಷಮಾ ಗೋಡಬೋಲೆ

KannadaprabhaNewsNetwork |  
Published : May 30, 2025, 12:24 AM IST
ಸುಷಮಾ ಗೋಡಬೋಲೆ ಸಭೆ ನಡೆಸಿದರು  | Kannada Prabha

ಸಾರಾಂಶ

ಪ್ರಸ್ತುತ ಮಳೆಯ ಕಾರಣದಿಂದ ಬೆಣ್ಣೆಹೊಳೆ ಸೇತುವೆ ಬಳಿ ನಿರ್ಮಿಸಿದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದೆ.

ಕಾರವಾರ: ಶಿರಸಿ-ಕುಮಟಾ ಹೆದ್ದಾರಿ ಕಾಮಗಾರಿಯನ್ನು ಶೀಘ್ರದಲ್ಲಿ ಸಂಪೂರ್ಣ ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿರಸಿ-ಕುಮಟಾ ಹೆದ್ದಾರಿ ಕಾಮಗಾರಿಯ ಮುಕ್ತಾಯಕ್ಕೆ ಜಿಲ್ಲಾಡಳಿತದ ಮೂಲಕ ಸಾಕಷ್ಟು ಕಾಲಾವಕಾಶ ನೀಡಿದ್ದರೂ ಗುತ್ತಿಗೆದಾರರು ಇದುವರೆಗೂ ಕಾಮಗಾರಿ ಮುಕ್ತಾಯಗೊಳಿಸದ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ ಉಸ್ತುವಾರಿ ಕಾರ್ಯದರ್ಶಿ, ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಹೆಚ್ಚುವರಿಯಾಗಿ ಯಂತ್ರೋಪಕರಣಗಳು ಸೇರಿದಂತೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದರ ಮೂಲಕ ಈ ಕಾಮಗಾರಿಯು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರಸ್ತುತ ಮಳೆಯ ಕಾರಣದಿಂದ ಬೆಣ್ಣೆಹೊಳೆ ಸೇತುವೆ ಬಳಿ ನಿರ್ಮಿಸಿದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು, ಶಾಲೆಗಳು ಆರಂಭವಾಗುವ ಕಾರಣ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರಿಗೆ ಸಂಚಾರಕ್ಕೆ ಅನುಕೂಲವಾಗುವಂತೆ 2 ದಿನದಲ್ಲಿ ಈ ರಸ್ತೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮರು ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು.

ಜಿಲ್ಲೆಯ ಹೆದ್ದಾರಿಗಳಲ್ಲಿ ನಿಗಧಿಗಿಂತ ಅಧಿಕ ಭಾರದ ಸರಕುಗಳನ್ನು ಹೊಂದಿರುವ ವಾಹನಗಳ ಸಂಚಾರದಿಂದ ಸೇತುವೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಇದನ್ನು ನಿಯಂತ್ರಿಸಲು ಜಿಲ್ಲೆಯ ಗಡಿ ಭಾಗದಲ್ಲಿಯೇ ಇಂತಹ ಅಧಿಕ ಭಾರದ ವಾಹನಗಳನ್ನು ಪ್ರತಿದಿನ ಪರಿಶೀಲಸಿ ಅವುಗಳನ್ನು ಗಡಿಭಾಗದಲ್ಲಿಯೇ ತಡೆಹಿಡಿದು ದೂರು ದಾಖಲಿಸುವಂತೆ ಮತ್ತು ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಪ್ರತೀ ವಾರ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೀಡುವ ಪರಿಹಾರ ಕ್ರಮಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವಂತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಸೂಕ್ತ ಸ್ಥಳದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಮಾನ್ಸೂನ್ ಎದುರಿಸುವ ಕುರಿತಂತೆ ಈಗಾಗಲೇ ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಮಳೆಯಿಂದ ಹಾನಿಯಾದ ಪ್ರಕರಣಗಳಲ್ಲಿ ಕೂಡಲೇ ಪರಿಹಾರ ವಿತರಿಸುವಂತೆ ಮತ್ತು ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸ್ಥಳಾಂತರಕ್ಕೆ ಕಾಳಜಿ ಕೇಂದ್ರಗಳಲ್ಲಿ ಸಿದ್ಧವಾಗಿಟ್ಟುಕೊಂಡು ಅಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲ ಶಾಲೆಗಳ ಸುರಕ್ಷತೆ ಬಗ್ಗೆ ಪರಿಶೀಲಿಸಿ ವರಿದಿ ನೀಡುವಂತೆ ಮತ್ತು ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಮೂಲಕ ಅವರ ಶಿಕ್ಷಣ ಮೊಟಕುಗೊಳ್ಳದಂತೆ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ತಿಳಿಸಿದರು.

ಪೋಕ್ಸೋ ಕಾಯಿದೆ ಮತ್ತು ಬಾಲ್ಯ ವಿವಾಹ ನಿಷೇಧ ಕುರಿತಂತೆ ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಮೂಡಿಸಬೇಕು. ಕಾರವಾರದಲ್ಲಿ ಬಾಲಕರ ಮಂದಿರ ತೆರೆಯುವ ಬಗ್ಗೆ ಮತ್ತು ರಸ್ತೆಯಲ್ಲಿ ಸಂಚರಿಸುವ ಬಿಡಾಡಿ ದನಗಳ ರಕ್ಷಣೆಗೆ ಗೋಶಾಲೆ ತೆರೆಯುವ ಅಗತ್ಯವಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಆರೋಗ್ಯ ಇಲಾಖೆಯಿಂದ ಕೋವಿಡ್ ಕುರಿತಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಸಿಸೇರಿಯನ್ ಹೆರಿಗೆಗಳ ಸಂಖ್ಯೆ ಅಧಿಕವಾಗಿದ್ದು, ಸಹಜ ಹೆರಿಗೆಯ ಕುರಿತಂತೆ ಗರ್ಭಿಣಿಯರಿಗೆ ವಿಶೇಷ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಪೊಲೀಸ್ ವರಿಷ್ಠ ಎಂ.ನಾರಾಯಣ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮತ್ತಿತರರು ಇದ್ದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ