ಅರ್ಧಕ್ಕೆ ನಿಂತ ಶಾಲಾ ಕಟ್ಟಡ ಪೂರ್ಣಗೊಳಿಸಿ

KannadaprabhaNewsNetwork |  
Published : Jun 21, 2026, 02:15 AM IST
ಪೋಟೊ20ಕೆಎಸಟಿ4: ಕುಷ್ಟಗಿ ಪಟ್ಟಣದ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಶಿಕ್ಷಕರು ಹಾಗೂ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಬಿಇಒ ಕಚೇರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು ₹32 ಲಕ್ಷ ವೆಚ್ಚದಲ್ಲಿ ಎರಡು ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು

ಕುಷ್ಟಗಿ: ಪಟ್ಟಣದ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಹಾಗೂ ಶಾಲೆಯ ಕಾಂಪೌಂಡ್‌ಗೆ ಹೊಂದಿಕೊಂಡು ಸ್ಥಾಪಿಸಲಾಗಿರುವ ಡಬ್ಬಿ ಅಂಗಡಿಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಶಿಕ್ಷಕರು ಹಾಗೂ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಬಿಇಒ ಕಚೇರಿ,ಪುರಸಭೆ ಮತ್ತು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು.

ಬಿಇಒ ಕಚೇರಿಯ ವ್ಯವಸ್ಥಾಪಕ ಶಿವಶಂಕರಪ್ಪಗೆ ಮನವಿ ಸಲ್ಲಿಸಿದ ಬಳಿಕ ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬಿಳಗಿ ಹಾಗೂ ಕುಷ್ಟಗಿ ಪೊಲೀಸ್ ಠಾಣೆ ಅಧಿಕಾರಿಗಳಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು ₹32 ಲಕ್ಷ ವೆಚ್ಚದಲ್ಲಿ ಎರಡು ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ನಿರ್ಮಿತಿ ಕೇಂದ್ರ ಗುತ್ತಿಗೆ ಪಡೆದಿದ್ದರೂ ಕಳೆದ ಒಂದೂವರೆ ವರ್ಷದಿಂದ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿದೆ ಎಂದು ಆರೋಪಿಸಿದರು.

ಈ ಕುರಿತು ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಾಗಲೇ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ತರಗತಿ ಕೊಠಡಿಗಳ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಕಾಮಗಾರಿ ತಕ್ಷಣ ಪೂರ್ಣಗೊಳಿಸಬೇಕು ಹಾಗೂ ಶಾಲೆಯ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕಪಾಟು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಡಿಎಂಸಿ ಸದಸ್ಯ ಮಲ್ಲಪ್ಪ ಕಂಚಿ ಮಾತನಾಡಿ, ಹಲವು ಬಾರಿ ಮನವಿ ಸಲ್ಲಿಸಿದರೂ ನಿರ್ಮಿತಿ ಕೇಂದ್ರ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೂಡಲೇ ಕಾಮಗಾರಿ ಪೂರ್ಣಗೊಳಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸದಸ್ಯ ಮಂಜುನಾಥ ತಳುಗೇರಿ ಮಾತನಾಡಿ, ಶಾಲೆಯಲ್ಲಿ ಎಲ್‌ಕೆಜಿಯಿಂದ ಮೂರನೇ ತರಗತಿವರೆಗೆ ಆಂಗ್ಲ ಮಾಧ್ಯಮ ಆರಂಭಗೊಂಡಿದ್ದು, ಮುಂದಿನ ತರಗತಿಗಳಿಗೆ ಅಗತ್ಯ ಕೊಠಡಿಗಳ ಕೊರತೆಯಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಮಕ್ಕಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ಮುಖ್ಯಶಿಕ್ಷಕ ಸಿದ್ರಾಮಪ್ಪ ಅಮರಾವತಿ, ಎಸ್‌ಡಿಎಂಸಿ ಸದಸ್ಯರಾದ ಗುರುರಾಜ ಆಗೋಲಿ, ರಾಮಣ್ಣ ಭೋವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಅವಶ್ಯ
ಪ್ರತಿಯೊಬ್ಬರಿಗೂ ಪ್ರಧಾನಿ ಮೋದಿ ಅಭಿವೃದ್ಧಿ ಫಲ ತಲುಪಿದೆ