ತಾರಾಲಯ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ

KannadaprabhaNewsNetwork |  
Published : Sep 04, 2024, 01:53 AM IST
3ಡಿಡಬ್ಲೂಡಿ4ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದ ಕಾರ್ಯಚಟುವಟಿಕೆಗಳನ್ನು ಸಚಿವ ಎನ್‌.ಎಸ್‌.ಭೋಸರಾಜು ಪರಿಶೀಲಿಸಿದರು.  | Kannada Prabha

ಸಾರಾಂಶ

ಉತ್ಕೃಷ್ಟಮಟ್ಟದ ತಾರಾಲಯ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈಗಾಗಲೆ ₹ 4.5 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವ ಬೋಸರಾಜು ಹೇಳಿದರು.

ಧಾರವಾಡ:

ಇಲ್ಲಿಯ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ₹ 9 ಕೋಟಿ ವೆಚ್ಚದ ತಾರಾಲಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್‌. ಬೋಸರಾಜು ಸೂಚನೆ ನೀಡಿದರು.

ಮಂಗಳವಾರ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಆವರಣದಲ್ಲಿ ಉತ್ಕೃಷ್ಟಮಟ್ಟದ ತಾರಾಲಯ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈಗಾಗಲೆ ₹ 4.5 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಅನುಕೂಲಕ್ಕಾಗಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಚಿತ್ರದುರ್ಗ, ವಿಜಯಪುರ, ರಾಮನಗರ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ. ಇನ್ನುಳಿದ ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದ ಅವರು, ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರವು 24 ಎಕರೆ ಜಾಗೆ ಹೊಂದಿದ್ದು, ಅಂತಾರಾಷ್ಟ್ರೀಯ ಕೇಂದ್ರವನ್ನಾಗಿ ಮೇರ್ಲ್ದೆಜೆಗೆ ಏರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಕ್ರಮಕೈಗೊಳ್ಳಲಾಗುತ್ತಿದೆ. ರಾಜ್ಯದ ಎಲ್ಲ ಶಾಲೆಗಳಲ್ಲಿ ಇಲಾಖೆಯಿಂದ ವಿಜ್ಞಾನ ಕೌಶಲ್ಯ ತರಬೇತಿ ಹಮ್ಮಿಕೊಳ್ಳಲಾಗುವುದು. ಆಯಾ ಕಾಲಘಟ್ಟಕ್ಕೆ ಅನುಗುಣವಾದ ಹೊಸ ಪ್ರದರ್ಶನಗಳನ್ನು ವಿಜ್ಞಾನ ಕೇಂದ್ರಗಳಲ್ಲಿ ಅಳವಡಿಸಲು ಕ್ರಮಕೈಗೊಳ್ಳಬೇಕು. ಅಭಿವೃದ್ದಿ ಕಾರ್ಯಗಳು ಸುಲಲಿತವಾಗಿ ನಡೆಯುವಂತೆ ಕ್ರಮವಹಿಸಲು ಆಗಾಗ್ಗೆ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.

ಕೇರಳ ಹಾಗೂ ಗುಜರಾತ ಮಾದರಿಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ₹ 200 ಕೋಟಿ ವೆಚ್ಚದಲ್ಲಿ ವಿಜ್ಞಾನ ನಗರ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಈ ವೇಳೆ ಶಾಸಕರಾದ ಎನ್.ಎಚ್. ಕೋನರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ