ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಜಿಪಂ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕಾಮಗಾರಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು. ಸ್ಥಳ ಪರಿಶೀಲನೆ, ತಾಂತ್ರಿಕ ಅನುಮೋದನೆ, ಭೂಸ್ವಾನ ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಆರಂಭಿಕ ಹಂತದಲ್ಲಿಯೇ ಪೂರ್ಣಗೊಳಿಸಿ, ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದರು.
ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೆಲವು ಕಾಮಗಾರಿಗಳು ಆರಂಭವಾಗದಿರುವುದು ಗಂಭೀರ ವಿಚಾರವಾಗಿವೆ. ಸಣ್ಣಪುಟ್ಟ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ವಿಳಂಬ ಮಾಡಬಾರದು. ಮುಂದಿನ ಜನವರಿಯೊಳಗೆ ಎಲ್ಲ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸಿ ಅಗತ್ಯ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.ಕಾಮಗಾರಿಗಳ ಆದ್ಯತೆಗಳನ್ನು ಆರಂಭದಲ್ಲಿಯೇ ಅಂತಿಮಗೊಳಿಸಬೇಕು. ಆರು ತಿಂಗಳಿಗೊಮ್ಮೆ ಆದ್ಯತೆ ಬದಲಾಯಿಸುವುದರಿಂದ ಅನುಷ್ಠಾನದಲ್ಲಿ ಗೊಂದಲ ಉಂಟಾಗುತ್ತದೆ. ಅನುಮೋದಿತ ಕಾಮಗಾರಿಗಳ ಒಪ್ಪಂದ ಹಾಗೂ ಸಾಮಗ್ರಿಗಳ ಖರೀದಿ ಪ್ರಕ್ರಿಯೆಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಿ ಕಾಮಗಾರಿಗಳ ಅನುಷ್ಠಾನಕ್ಕೆ ಸಿದ್ಧರಾಗಬೇಕು ಎಂದರು.
ವಿದ್ಯಾರ್ಥಿನಿಲಯಗಳ ದುರಸ್ತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸಿರುವ ಅನುದಾನವನ್ನು ಸಕಾಲದಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ವಸತಿ ಮತ್ತು ಕಲಿಕಾ ವಾತಾವರಣ ಕಲ್ಪಿಸಬೇಕು. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುವಂತೆ ಕ್ರಮ ವಹಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳ ಅಗತ್ಯತೆ, ಸ್ಥಳ ಲಭ್ಯತೆ ಹಾಗೂ ತಾಂತ್ರಿಕ ಅಂಶಗಳನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ವೇತನ, ಪಿಂಚಣಿ, ಗ್ರಾಚ್ಯುಟಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೆಚ್ಚ ಸೇರಿದಂತೆ ಬದ್ಧ ವೆಚ್ಚಗಳಿಗೆ ಅಗತ್ಯವಿರುವ ಅನುದಾನದ ಕುರಿತು ಪರಿಶೀಲಿಸಿ ಹೆಚ್ಚುವರಿ ಅನುದಾನದ ಪ್ರಸ್ತಾವನೆಗಳನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ. ಖರೀದಿ ಪ್ರಕ್ರಿಯೆ ಹಾಗೂ ನಾಗರಿಕ ಕಾಮಗಾರಿಗಳನ್ನು ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳನ್ವಯ ಪಾರದರ್ಶಕವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದರು.
ಜಿಲ್ಲೆಯ ಹಾಲಿನ ಬ್ಯಾಂಕ್ ಕಾರ್ಯಾರಂಭಕ್ಕೆ ಅಗತ್ಯವಿರುವ ಬಹುತೇಕ ಮೂಲಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ, ಆಟೋಕ್ಲೇವ್ ಯಂತ್ರ, ಡೀಪ್ ಫ್ರೀಜರ್ ಸೇರಿದಂತೆ ಮೂರು ಪ್ರಮುಖ ಉಪಕರಣಗಳ ಕೊರತೆಯಿದ್ದು, ಅವುಗಳನ್ನು ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯ ಉಪಕರಣಗಳು ಲಭ್ಯವಾದಲ್ಲಿ ಹಾಲಿನ ಬ್ಯಾಂಕ್ ಸಂಪೂರ್ಣವಾಗಿ ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ ಎಂದರು.