ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

KannadaprabhaNewsNetwork | Published : Nov 28, 2024 12:31 AM

ಸಾರಾಂಶ

ಜಿಲ್ಲೆಯಲ್ಲಿನ ಅಂಗನವಾಡಿಗಳಲ್ಲಿ ಉತ್ತಮ ರೀತಿಯ ಗಾಳಿ ಬೆಳಕು ಸೇರಿದಂತೆ ಮೂಲಭೂತ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು

ಗದಗ: ಅನುಮೋದನೆಗೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಜಿಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಲವು ಇಲಾಖೆಯ ಕಾಮಗಾರಿಗಳ ಕ್ರಿಯಾ ಯೋಜನೆಗಳು ಬದಲಾವಣೆಗೊಂಡಿದ್ದು, ಬದಲಾವಣೆಗೊಂಡ ಕಾಮಗಾರಿ ಒಳಗೊಂಡಂತೆ ಈಗಾಗಲೇ ಅನುಮೋದನೆಗೊಂಡ ಕಾಮಗಾರಿ ಉತ್ತಮ ಗುಣಮಟ್ಟದಿಂದ ಪೂರ್ಣಗೊಳಿಸಬೇಕು, ಕೃಷಿ ಬೆಳೆಗಳ ವಿಮೆ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿನ ಅಂಗನವಾಡಿಗಳಲ್ಲಿ ಉತ್ತಮ ರೀತಿಯ ಗಾಳಿ ಬೆಳಕು ಸೇರಿದಂತೆ ಮೂಲಭೂತ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು, ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಹೊಂದುವಂತೆ ಎಲ್ಲರೂ ಶ್ರಮಿಸಬೇಕು. ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಅನುಕೂಲಕರ ವಾತಾವರಣ ನಿರ್ಮಾಣ ಮಾಡುವುದು ಇಲಾಖೆ ಅಧಿಕಾರಿಗಳ ಕರ್ತವ್ಯವಾಗಿದೆ ಎಂದರು.

ಜಿಪಂ ಸಿಇಒ ಭರತ.ಎಸ್ ಮಾತನಾಡಿ, ಜಿಲ್ಲೆಯಲ್ಲಿ ನಗರ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲು ನಗರದ ಹೃದಯ ಭಾಗದಲ್ಲಿನ ಕಟ್ಟಡದ ಲಭ್ಯವಿದೆ. ಹಾಗಾಗಿ ಭಾರತ ಸರ್ಕಾರದ ಎನ್‌.ಎಚ್‌.ಎಂನಿಂದ ಅನುಮೋದನೆ ನೀಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಕಡಲೆ, ಜೋಳ, ಗೋದಿ, ಬೆಳೆಗಳ ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದ್ದು, ಯಾವುದೇ ಅಭಾವವಿರುವುದಿಲ್ಲ. ರೈತರಿಗೆ ಈಗಾಗಲೇ ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 42 ವಸತಿ ನಿಲಯಗಳಿದ್ದು, ಅದರಲ್ಲಿ 35 ವಸತಿ ನಿಲಯಗಳಿಗೆ ಸ್ವಂತ ಕಟ್ಟಡವಿದೆ, ಉಳಿದ ವಸತಿ ನಿಲಯಗಳಿಗೆ ಜಾಗ ಲಭ್ಯವಿದ್ದು, ಈಗಾಗಲೇ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಎಲ್ಲ ಶಾಲೆಗಳಲ್ಲಿ ಉತ್ತಮ ಬೋಧನೆ ನಡೆಯುತ್ತಿದ್ದು, ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಕ ಮಾಡಲಾಗಿದೆ. ವಿವೇಕ ಯೋಜನೆಯಡಿ 95 ಶಾಲೆಗಳಲ್ಲಿ 124 ಕೊಠಡಿಗಳ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೇಷ್ಮೆ, ಪಶು ಸಂಗೋಪನೆ, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಸೇರಿದಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಚರ್ಚಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಹಿಂದುಳಿದ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತಿ ಕೋಟಿಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Share this article