ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ಸಮಗ್ರ ಸಮೀಕ್ಷೆ

KannadaprabhaNewsNetwork |  
Published : Apr 28, 2025, 11:46 PM IST
ಚಿತ್ರ :  28ಎಂಡಿಕೆ3 : ಮಾಸ್ಟರ್ ತರಬೇತಿದಾರರಿಗೆ ಸೋಮವಾರ ನಡೆದ ಕಾರ್ಯಾಗಾರ.  | Kannada Prabha

ಸಾರಾಂಶ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ. ಸಿಇಒ ನಿರ್ದೇಶನ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ 5 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಸಂಬಂಧ ಮಾಸ್ಟರ್ ತರಬೇತಿದಾರರಿಗೆ ಸೋಮವಾರ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್‌ದಾಸ್ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಮಾಸ್ಟರ್ ಟ್ರೈನರ್‌ಗಳು ಪರಿಶಿಷ್ಟ ಜಾತಿಯ ಕುಟುಂಬಗಳು ಹೇಳುವ ಮಾಹಿತಿ ಮೊಬೈಲ್ ಆಪ್ ಮೂಲಕ ಭರ್ತಿ ಮಾಡಬೇಕು. ಈ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಸಮೀಕ್ಷೆ ಅತೀ ಮುಖ್ಯ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಅತೀಮುಖ್ಯ ಕಾರ್ಯದಲ್ಲಿ ಒಂದಾಗಿದೆ. ಆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯಲ್ಲಿನ ಯಾವುದೇ ಕುಟುಂಬಗಳು ಬಿಟ್ಟು ಹೋಗದಂತೆ ಸಮೀಕ್ಷೆ ಮಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸಮೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿ ವೈಜ್ಞಾನಿಕ ಮತ್ತು ವಸ್ತುನಿಷ್ಠವಾಗಿ ಸಮೀಕ್ಷೆ ಮಾಡಬೇಕು. ಸಂಶಯಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ನಡೆಸಬೇಕು ಎಂದು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಸಮೀಕ್ಷೆ ಕೈಗೊಳ್ಳಲಾಗಿದ್ದು, ಮೊಬೈಲ್ ಆ್ಯಪ್ ಆಧಾರ್‌ದಲ್ಲಿ ಮನೆ ಮನೆ ಸಮೀಕ್ಷೆ ಮಾಡಬೇಕಿದೆ ಎಂದು ತಿಳಿಸಿದರು.

ಸರ್ಕಾರದ ಪ್ರಮುಖ ಕಾರ್ಯಕ್ರಮ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು, ಯಾವುದೇ ರೀತಿಯ ಸಂಶಯ ಇಲ್ಲದಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕೈಗೊಳ್ಳುವಂತೆ ಸಲಹೆ ಮಾಡಿದರು.

ಜಿಲ್ಲೆಯ 544 ಪೋಲಿಂಗ್ ಸ್ಟೇಷನ್ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ತಾಲೂಕು ಸಂಪನ್ಮೂಲ ತರಬೇತಿ ಅಧಿಕಾರಿಗಳು ಸಮೀಕ್ಷೆ ಮಾಡುವವರಿಗೆ ಸರಿಯಾದ ಮಾಹಿತಿ ನೀಡುವಂತಾಗಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸಮಗ್ರ ಸಮೀಕ್ಷೆ ಕೈಗೊಂಡು ದತ್ತಾಂಶ ಸಂಗ್ರಹಿಸಬೇಕಿದೆ ಎಂದರು.

ಮೇ 05 ರಿಂದ 17 ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಹಾಗೆಯೇ ಮೇ 19 ರಿಂದ 21 ರವರೆಗೆ ಸಮೀಕ್ಷೆ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರ ಕೈಗೊಂಡು ಮನೆ ಮನೆ ಭೇಟಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿಗಳ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.

ಮಡಿಕೇರಿ ತಾಲೂಕಿಗೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ (ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ), ಸೋಮವಾರಪೇಟೆಯ ಅಂಬೇಡ್ಕರ್ ಭವನ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ, ಈ ತಾಲೂಕುಗಳಲ್ಲಿ ಬೆಳಗ್ಗೆ 11 ಹಾಗೂ ಕುಶಾಲನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ತಹಸೀಲ್ದಾರರ ನೇತೃತ್ವದಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ಶೇಖರ್ ಅವರು ತಿಳಿಸಿದರು.

ಮೇ 2 ರಂದು ಗಣತಿದಾರರ ಹಂತದಲ್ಲಿ ತರಬೇತಿ ನಡೆಯಲಿದೆ. ತರಬೇತಿಗೆ ನಿಯೋಜನೆಗೆ ಆಗಿರುವ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಪರಿಶಿಷ್ಟ ಜಾತಿಯಲ್ಲಿನ ಮೂಲ ಜಾತಿಯನ್ನು ಸಮೀಕ್ಷೆ ಮಾಡುವುದು ಅತೀ ಮುಖ್ಯವಾಗಿದೆ ಎಂದು ಶೇಖರ್ ಅವರು ನುಡಿದರು.

‘ಮಾಸ್ಟರ್ ತರಬೇತಿದಾರರಾದ ಪ್ರಶಾಂತ್ ಮಾತನಾಡಿ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮಾಹಿತಿ ತುಂಬುವ ವಿಧಾನ, ಜಾತಿ, ಮೂಲ ಜಾತಿ/ಉಪ ಜಾತಿ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಮತ್ತು ಸದಸ್ಯರ ಹೆಸರು, ಲಿಂಗ, ವಯಸ್ಸು, ಆಧಾರ್ ಕಾರ್ಡ್ ಸಂಖ್ಯೆ, ಶಿಕ್ಷಣ/ ವಿದ್ಯಾಭ್ಯಾಸ, ವೃತ್ತಿ, ಕುಟುಂಬದ ಕುಲಕಸುಬು, ಆಸ್ತಿವಿವರ, ಕೃಷಿ, ಕುಟುಂಬದ ಆದಾಯ, ಉದ್ಯೋಗ, ಹೀಗೆ ಹಲವು ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್‌ನಲ್ಲಿ ತುಂಬಬೇಕಿದೆ ಎಂದು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!