ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಲೋಕಸಭಾ ಚುನಾವಣೆಯ ಮತದಾನದ ದಿನದಂದು ಅರ್ಹ ಮತದಾರರೆಲ್ಲರೂ ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯಿಂದ ಸೋಮವಾರ ನಗರದ ಕೋಟೆ ವೃತ್ತದಲ್ಲಿ ಆಯೋಜಿಸಲಾಗಿದ್ದ ಟ್ರ್ಯಾಕ್ಟರ್‌ಗಳ ಮೂಲಕ ಮತದಾನ ಜಾಗೃತಿಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ನಮ್ಮ ಹಕ್ಕು, ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. 78 ರಷ್ಟು ಮತದಾನವಾಗಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. 90 ರಷ್ಟು ಮತದಾನವಾಗಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಪ್ರಜೆಗಳಿಗೆ ನೀಡಿದ ವಿಶೇಷ ಅಧಿಕಾರವಾಗಿದೆ. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದೆ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮತದಾನ ಮಾಡಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದರು.ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಮತದಾನ ಮಾಡುವುದು ಶ್ರೇಷ್ಠ ಕಾರ್ಯ. ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.
ಟ್ರ್ಯಾಕ್ಟರ್ ಜಾಥಾ ಕೋಟೆ ವೃತ್ತದಿಂದ ಪ್ರಾರಂಭವಾಗಿ ಬೇಲೂರು ರಸ್ತೆ ತೊಗರಿಹಂಕಲ್ ವೃತ್ತ, ಐಜಿ ರಸ್ತೆ, ಟೌನ್ ಕ್ಯಾಂಟೀನ್ ರಸ್ತೆ ಮೂಲಕ ಸಂಚರಿಸಿ ಎಂಜಿ ರಸ್ತೆಯಲ್ಲಿ ಅಂತ್ಯವಾಯಿತು. ಜಾಥಾದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ರೈತರು ಟ್ರ್ಯಾಕ್ಟರ್‌ನೊಂದಿಗೆ ಪಾಲ್ಗೊಂಡಿದ್ದರು.ಪೋಟೋ ಪೈಲ್ ನೇಮ್ 1 ಕೆಸಿಕೆಎಂ 7ಚಿಕ್ಕಮಗಳೂರಿನ ಕೋಟೆ ವೃತ್ತದಲ್ಲಿ ಸೋಮವಾರ ಆಯೋಜಿಸಿದ್ದ ಟ್ರ್ಯಾಕ್ಟರ್‌ಗಳ ಮೂಲಕ ಮತದಾನ ಜಾಗೃತಿಗೆ ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಜಂಟಿ ಕೃಷಿ ನಿರ್ದೇಶಕಿ ಸುಜಾತಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ ಇದ್ದರು.