ಕನ್ನಡಪ್ರಭ ವಾರ್ತೆ ಮೂಡಲಗಿ
ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಧುನೀಕರಣ ಮತ್ತು ಡಿಜಿಟಲೀಕರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಜಿಲ್ಲೆಯ 743 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಈಗ ''''''''ಸಾಮಾನ್ಯ ಸೇವಾ ಕೇಂದ್ರಗಳಾಗಿ'''''''' ಬದಲಾಗಿವೆ. ರೈತರಿಗೆ ಬ್ಯಾಂಕಿಂಗ್ ಜೊತೆಗೆ ವಿವಿಧ ಸರ್ಕಾರಿ ಸೇವೆಗಳನ್ನು ಒದಗಿಸುತ್ತಿವೆ. ಸುಗಮ ಹಣ ವರ್ಗಾವಣೆಗಾಗಿ ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಮೊದಲ ಹಂತದಲ್ಲಿ 100 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ-ಎಟಿಎಂ ಸೌಲಭ್ಯ ನೀಡಲಾಗಿದೆ.
ರೈತರಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ಒಂದೇ ಸೂರಿನಡಿ ಒದಗಿಸಲು ಜಿಲ್ಲೆಯ 200 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ''''''''ಕಿಸಾನ್ ಸಮೃದ್ಧಿ ಕೇಂದ್ರ''''''''ಗಳಾಗಿ ಕಾರ್ಯನಿರ್ವಹಿಸುತ್ತಿವೆ. ಬೆಳಗಾವಿ ಜಿಲ್ಲೆಯ 165 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕೃಷಿ ಮೂಲಸೌಕರ್ಯ ನಿಧಿ ಯೋಜನೆಯಡಿ, ಗೋದಾಮು ಅಥವಾ ಶೇಖರಣಾ ಸೌಲಭ್ಯ ನಿರ್ಮಿಸಲು ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಸಾಲ ಒದಗಿಸಲಾಗಿದೆ. ಜಿಲ್ಲೆಯ ಎಲ್ಲಾ 1158 ಪಿಕೆಪಿಎಸ್‌ಗಳ ಸಿಬ್ಬಂದಿಗೆ ಡಿಜಿಟಲ್ ಅಕೌಂಟಿಂಗ್ ಮತ್ತು ಹಣಕಾಸು ಕಾರ್ಯಾಚರಣೆಗಳ ಬಗ್ಗೆ ಈಗಾಗಲೇ ತರಬೇತಿ ನೀಡಿ ಸಜ್ಜುಗೊಳಿಸಲಾಗಿದೆ. ಜಿಲ್ಲೆಯ ಸಹಕಾರಿ ವಲಯವನ್ನು ಡಿಜಿಟಲೀಕರಣಗೊಳಿಸುವ ಮೂಲಕ ರೈತರಿಗೆ ಬ್ಯಾಂಕಿಂಗ್ ಮತ್ತು ಕೃಷಿ ಸೇವೆಗಳು ಸ್ಥಳೀಯವಾಗಿಯೇ ಸುಲಭವಾಗಿ ದೊರೆಯುವಂತಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.