ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣಕ್ಕೆ ಖಂಡನೆ

KannadaprabhaNewsNetwork |  
Published : Aug 15, 2026, 02:45 AM IST
14ಎಚ್ಎಸ್ಎನ್6 :  | Kannada Prabha

ಸಾರಾಂಶ

ವಿಜ್ಞಾನ ಮತ್ತು ತಂತ್ರಜ್ಞಾನದ ಇಪ್ಪತ್ತೊಂದನೇ ಶತಮಾನದಲ್ಲಿಯೂ ಜಾತೀಯತೆ ಹಾಗೂ ಅಸ್ಪೃಶ್ಯತೆಯ ಮನೋಭಾವ ಮುಂದುವರಿದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಈ ರೀತಿಯ ಅಸಹ್ಯಕರ ಹಾಗೂ ಅಮಾನವೀಯ ಕೃತ್ಯ ನಡೆಸಿರುವುದು ಖಂಡನೀಯ. ಇದು ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಮನುವಾದಿ ವಿಕೃತ ಸಿದ್ಧಾಂತದ ನಗ್ನ ಪ್ರದರ್ಶನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹವನ ನಡೆಸುವ ಮೂಲಕ ‘ಶುದ್ಧೀಕರಣ’ ಮಾಡಿದ ಘಟನೆ ಖಂಡಿಸಿ ಶುಕ್ರವಾರ ನಗರದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಇತ್ತೀಚೆಗೆ ಭಾಷಣ ಮಾಡಿ ತೆರಳಿದ ವೇದಿಕೆಯನ್ನು ಗಂಗಾಜಲ ಪ್ರೋಕ್ಷಣೆ ಮಾಡಿ, ಹವನ ನಡೆಸುವ ಮೂಲಕ ‘ಶುದ್ಧೀಕರಣ’ ಮಾಡಿದ ಘಟನೆ ಖಂಡಿಸಿ ಶುಕ್ರವಾರ ನಗರದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ನಗರದ ಬಾಬಾಸಾಹೇಬ್ ಡಾ. ಬಿ. ಆರ್‌. ಅಂಬೇಡ್ಕರ್‌ ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಕೋಮುವಾದಿ ಶಕ್ತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಲ್ಲಿಕಾರ್ಜುನ ಖರ್ಗೆಯವರಂತಹ ಹಿರಿಯ ನಾಯಕರು ಹಾಗೂ ದೇಶದ ಪ್ರಮುಖ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿರುವ ವ್ಯಕ್ತಿಯೊಬ್ಬರು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯನ್ನು ‘ಶುದ್ಧೀಕರಣ’ ಮಾಡುವ ಹೆಸರಿನಲ್ಲಿ ಗಂಗಾಜಲ ಹಾಗೂ ಹವನದ ಮೂಲಕ ಶುದ್ಧೀಕರಿಸಿರುವುದು ಜಾತೀಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಕೃಷ್ಣದಾಸ್ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನದ ಇಪ್ಪತ್ತೊಂದನೇ ಶತಮಾನದಲ್ಲಿಯೂ ಜಾತೀಯತೆ ಹಾಗೂ ಅಸ್ಪೃಶ್ಯತೆಯ ಮನೋಭಾವ ಮುಂದುವರಿದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಈ ರೀತಿಯ ಅಸಹ್ಯಕರ ಹಾಗೂ ಅಮಾನವೀಯ ಕೃತ್ಯ ನಡೆಸಿರುವುದು ಖಂಡನೀಯ. ಇದು ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಮನುವಾದಿ ವಿಕೃತ ಸಿದ್ಧಾಂತದ ನಗ್ನ ಪ್ರದರ್ಶನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಅವರು ದೇಶದಲ್ಲಿ ಸಮಾನತೆ, ಸ್ವಾತಂತ್ರ್ಯ ಹಾಗೂ ಸಾಮಾಜಿಕ ನ್ಯಾಯವನ್ನು ಸ್ಥಾಪಿಸುವ ಉದ್ದೇಶದಿಂದ ಸಂವಿಧಾನದಲ್ಲಿ ಮಹತ್ವದ ಹಕ್ಕುಗಳನ್ನು ಕಲ್ಪಿಸಿದ್ದಾರೆ. ಸಂವಿಧಾನದ ೧೭ನೇ ವಿಧಿಯಡಿ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೂ ಸಾರ್ವಜನಿಕವಾಗಿ ಜಾತೀಯತೆಯನ್ನು ಪ್ರದರ್ಶಿಸುವ ಮೂಲಕ ಸಂವಿಧಾನದ ಮೂಲ ಆಶಯಗಳನ್ನೇ ಅಪಮಾನಿಸುವಂತಹ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಪ್ರತಿಭಟನಾಕಾರರು ಹೇಳಿದರು. ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಪ್ರಯತ್ನಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಾಮಾಜಿಕ ಸೌಹಾರ್ದತೆಗೆ ಅಪಾಯಕಾರಿಯಾಗಿವೆ. ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಮೂಡಿಸುವಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಅವರು ಆಗ್ರಹಿಸಿದರು.

ವೇದಿಕೆ ‘ಶುದ್ಧೀಕರಣ’ ಹೆಸರಿನಲ್ಲಿ ನಡೆದಿರುವ ಕೃತ್ಯವು ಇಡೀ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಘಟನೆಯ ಕುರಿತು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಘಟನೆಗೆ ಕಾರಣರಾದವರನ್ನು ತಕ್ಷಣ ಗುರುತಿಸಿ, ಅನ್ವಯಿಸುವ ಕಾನೂನುಗಳಡಿ ಪ್ರಕರಣ ದಾಖಲಿಸಬೇಕು. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಸಂವಿಧಾನ ವಿರೋಧಿ ಹಾಗೂ ಜಾತೀಯ ಮನೋಭಾವದ ಇಂತಹ ಕೃತ್ಯಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸಬಾರದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಸಾಮಾಜಿಕ ಸಮಾನತೆ, ಸಹಬಾಳ್ವೆ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಜಾತಿ, ಧರ್ಮದ ಆಧಾರದ ಮೇಲೆ ವ್ಯಕ್ತಿಯೊಬ್ಬರನ್ನು ಅವಮಾನಿಸುವ ಅಥವಾ ತಾರತಮ್ಯ ಮಾಡುವ ಯಾವುದೇ ಪ್ರಯತ್ನವನ್ನು ಪ್ರಜಾಪ್ರಭುತ್ವ ಸಮಾಜ ಒಪ್ಪಿಕೊಳ್ಳಬಾರದು ಎಂದು ಪ್ರತಿಭಟನಾಕಾರರು ಒತ್ತಿ ಹೇಳಿದರು.ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಮುಖಂಡ ಕೃಷ್ಣದಾಸ್, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ., ದಲಿತ ಮುಖಂಡರಾದ ಮಂಜು ತೇಜೂರು, ಉಮೇಶ್, ತೋಟೇಶ್, ರಾಮು, ರಮೇಶ್ ಸಾತೇನಹಳ್ಳಿ, ಜಗದೀಶ್ ಚೌಡಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೌಧದಲ್ಲಿ ಕಾಗದ ರಹಿತ ಆಡಳಿತ ಜಾರಿಗೆ ಕ್ರಮ: ಜಿ.ಎಸ್‌.ಪಾಟೀಲ್‌
ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಮನವಿ