ರಾಜಕೀಯ ಭಿನ್ನಾಭಿಪ್ರಾಯದ ಕಾರಣಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಮಾಡಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ
ಬಳ್ಳಾರಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಶನಿವಾರ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.
ಉತ್ತರಾಖಂಡದ ಹಾಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ಸ್ಥಳವನ್ನು ಕೆಲವರು ಶುದ್ಧೀಕರಣಗೊಳಿಸಿರುವ ಘಟನೆಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಭಿನ್ನಾಭಿಪ್ರಾಯದ ಕಾರಣಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಮಾಡಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು.
ಈ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು,ಘಟನೆ ಖಂಡಿಸಿದ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ. ಇದು ರಾಜಕೀಯ ದ್ವೇಷದ ಕ್ರಮವಾಗಿದ್ದು, ಕೂಡಲೇ ಎಫ್‌ಐಆರ್ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ನಾಯಕರ ವಿರುದ್ಧ ತನಿಖಾ ಸಂಸ್ಥೆ ಹಾಗೂ ಪೊಲೀಸ್ ವ್ಯವಸ್ಥೆ ದುರುಪಯೋಗಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು ಇಂತಹ ಕ್ರಮಗಳಿಂದ ಕಾಂಗ್ರೆಸ್ ನಾಯಕರ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಜಿಲ್ಲಾ ಉಸ್ತುವಾರಿ ಆನಂದ್ ಕುಮಾರ್, ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಜಿಲ್ಲಾ ನಗರ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್. ಈರನಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಎಲ್. ಮಾರೆಣ್ಣ, ಗುಜ್ಜಲ ಗಾದಿಲಿಂಗಪ್ಪ, ರುದ್ರಪ್ಪ, ಅಲಿವೇಲು ಸುರೇಶ್, ಸಣ್ಣ ನಾಗರಾಜ್, ನಟರಾಜ್, ಸಣ್ಣ ಹೊನ್ನೂರಪ್ಪ, ಜ್ಯೋತಿ ಸೇರಿದಂತೆ ಹಲವರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.