ಕನ್ನಡಪ್ರಭ ವಾರ್ತೆ ಬೀದರ್
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಸಲ್ಲಿಸಿ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಹೆಚ್ಚುತ್ತಿರುವ ಅವ್ಯವಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಆತಂಕಕ್ಕೆ ದೂಡುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳಿಗೆ ಕೇಂದ್ರ ಸರ್ಕಾರ ನೈತಿಕ ಹೊಣೆ ಹೊತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದೆಹಲಿ ಜಂತರ್-ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದನ್ನು ತೀವ್ರವಾಗಿ ಖಂಡಿಸಿದರು. ಪರೀಕ್ಷಾ ಅಕ್ರಮಗಳಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ ಅವರು, ನ್ಯಾಯ ಸಿಗುವವರೆಗೆ ಶಾಂತಿಯುತ ಹೋರಾಟವು ಮುಂದುವರಿಸುವುದಾಗಿ ತಿಳಿಸಿದರು.
ನೀಟ್ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಆಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯ ಖಂಡಿಸಿ, ಜೊತೆಗೆ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯವನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸುವ ಆದೇಶ ವಿರೋಧಿಸಿ, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಹಾಗೂ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಅವರ ಸಂಯುಕ್ತಾಶ್ರಯದಲ್ಲಿ ಗುರುವಾರ ಬಸವಕಲ್ಯಾಣ ನಗರದಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ ನಡೆಯಿತು.
ರ್‍ಯಾಲಿ ಬಸವೇಶ್ವರ ವೃತ್ತ ತಲುಪಿದ ಬಳಿಕ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಅಧ್ಯಕ್ಷ ಡಾ.ಜಬಿಯುಲ್ಲಾ ಖಾನ್ ಮಾತನಾಡಿ, ದೆಹಲಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿದರು. ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ವಕೀಲರಾದ ರಾಜಶ್ರೀ ಮಾತನಾಡಿ, ಶಿಕ್ಷಣವು ಸಂವಿಧಾನ ನೀಡಿರುವ ಮೂಲಭೂತ ಹಕ್ಕು. ಯಾವುದೇ ವಿದ್ಯಾರ್ಥಿಯ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗದಂತೆ ಸರ್ಕಾರ ನಡೆದುಕೊಳ್ಳಬೇಕು ಎಂದು ಹೇಳಿದರು. ಜಿಐಓ ಪ್ರತಿನಿಧಿ ಜೋಹಾ, ಕರ್ನಾಟಕ ವಿದ್ಯಾರ್ಥಿ ಸಂಘದ ಸಂದೀಪ್ ಮುಖುಂದೆ, ಜುಲ್ಫಿಕಾರ್ ಚಬುಕಸವಾರ್, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ರಾಜ್ಯ ಕಾರ್ಯದರ್ಶಿ ಅಸದ್ ಉಲ್ಲಾ ಖಾನ್, ಡಾ. ಜಬಿಯುಲ್ಲಾ ಖಾನ್, ಜಾವೇದ್ ಮತೀನ್ ಮತ್ತಿತರರು ಇದ್ದು ಪ್ರತಿಭಟನೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.