ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಜಾರಿ ಖಂಡನೆ

KannadaprabhaNewsNetwork |  
Published : Dec 25, 2025, 01:30 AM IST
24ಕೆಎಂಎನ್ ಡಿ13 | Kannada Prabha

ಸಾರಾಂಶ

ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ ಎಂಬ ಪ್ರಶ್ನೆ ಮೂಡಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ಇದನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಕಚೇರಿ ಎದುರು ಬಿಜೆಪಿ ತಾಲೂಕು ಅಧ್ಯಕ್ಷ ಪೀಹಳ್ಳಿ ರಮೇಶ್ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ನಂತರ ರಮೇಶ್ ಮಾತನಾಡಿ, ಸರ್ಕಾರದ ಈ ನಡೆಯಿಂದ ನಾಗರಿಕರ ಮೂಲ ಹಕ್ಕುಗಳನ್ನು ಕಸಿದಂತಾಗುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದರು.

ಅಲ್ಲದೇ, ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಭಯದಿಂದ ಜನರು ಮಾತನಾಡದೆ ಇರುವುದೇ ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ಮಾತನಾಡಿ, ರಾಜ್ಯ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಮೂಲ ತತ್ವಕ್ಕೆ ಹಾನಿ ಮಾತ್ರವಲ್ಲದೆ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರು ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ ಎಂದರು.

ಈ ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ ಎಂಬ ಪ್ರಶ್ನೆ ಮೂಡಿದೆ. ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರ ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರಿ ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು.

ನಂತರ ಪ್ರತಿಭಟನಾಕಾರರು ತಾಲೂಕು ಆಡಳಿತದ ಮೂಲಕ ಈ ಕಾನೂನು ನಾಗರಿಕರ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ ಹೀಗಾಗಿ ಇದನ್ನು ಜಾರಿಯಾಗಲು ಅವಕಾಶ ನೀಡದಂತೆ ಒತ್ತಾಯಿಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂತೋಷ್‌ಕುಮಾರ್, ಉಮೇಶ್‌ಕುಮಾರ್, ಕಿರಣ್‌ಸಿಂಗ್, ಕಷ್ಯಪ್, ಜಯಕುಮಾರ್, ಚಂದಗಾಲು ಶಂಕರ್, ಹುಂಡುವಾಡಿ ಮಹದೇವು, ಅಭಿಷೇಕ್, ನಂದೀಶ್, ಮಂಜುನಾಥ್, ಶಂಕರೇಗೌಡ ಸತೀಶ್, ಗಗನ್, ಪ್ರಶಾಂತ್, ದೇವಿರಮ್ಮ, ಫಾತಿಮ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ