ಪ್ರವಾಹ ಹಾನಿ ಕುರಿತು ನಿಖರ ಸಮೀಕ್ಷೆ ನಡೆಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್

KannadaprabhaNewsNetwork |  
Published : Aug 06, 2024, 12:34 AM IST
5ಸಿಎಚ್‌ಎನ್‌70ಕೊಳ್ಳೇಗಾಲದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ. ಮಣಿವಣ್ಣನ್ ನಡೆಸಿದರು. | Kannada Prabha

ಸಾರಾಂಶ

ಕೊಳ್ಳೇಗಾಲ ತಾಲೂಕಿನ ಪ್ರವಾಹ ಸಮಸ್ಯೆಯ ಗ್ರಾಮಗಳಲ್ಲಿ ಇತ್ತೀಚಿನ ಪ್ರವಾಹದಿಂದ ಉಂಟಾದ ಬೆಳೆ ಹಾಗೂ ಮನೆ ಹಾನಿ ಕುರಿತು ನಿಖರವಾಗಿ ಸರ್ವೇ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕೊಳ್ಳೇಗಾಲ ತಾಲೂಕಿನ ಪ್ರವಾಹ ಸಮಸ್ಯೆಯ ಗ್ರಾಮಗಳಲ್ಲಿ ಇತ್ತೀಚಿನ ಪ್ರವಾಹದಿಂದ ಉಂಟಾದ ಬೆಳೆ ಹಾಗೂ ಮನೆ ಹಾನಿ ಕುರಿತು ನಿಖರವಾಗಿ ಸರ್ವೇ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೂಚನೆ ನೀಡಿದರು.

ಕೊಳ್ಳೇಗಾಲದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಪ್ರವಾಹದಿಂದ ಜಮೀನುಗಳಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವ ಕುರಿತು ಕರಾರುವಕ್ಕಾಗಿ ಸರ್ವೇ ಮಾಡಬೇಕು. ಎಷ್ಟು ಪ್ರಮಾಣದಲ್ಲಿ ಬೆಳೆ ನಾಶವಾಗಿದೆ, ಎಷ್ಟು ಮನೆಗಳಿಗೆ ಹಾನಿಯಾಗಿದೆ ಎಂಬ ಬಗ್ಗೆ ಸಮರ್ಪಕವಾಗಿ ಸರ್ವೇ ನಡೆಸಬೇಕು ಎಂದರು.

ಪ್ರವಾಹ ಪೀಡಿತವಾಗಿದ್ದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಕಲುಷಿತ ಅಂಶಗಳಿಂದ ಹೊರತಾದ ನೀರು ಸರಬರಾಜಾಗುತ್ತಿದೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ನೀರು ಪರೀಕ್ಷೆಯ ವರದಿ ಪಡೆದುಕೊಳ್ಳಬೇಕು. ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ರೋಗ ರುಜಿನಗಳಿಗೆ ಆಸ್ಪದವಾಗದಂತೆ ನೈರ್ಮಲ್ಯಕ್ಕೆ ಮುತುವರ್ಜಿ ವಹಿಸಿ ನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಆರೋಗ್ಯ ಸಂಬಂಧಿ ಸೌಲಭ್ಯಗಳು ಹೆಚ್ಚಿನ ಜನರಿಗೆ ತಲುಪಬೇಕು. ಆರೋಗ್ಯ ಸೇವೆಯಲ್ಲಿ ಜಿಲ್ಲೆ ರಾಜ್ಯದಲ್ಲೇ ಮೇಲಿನ ಕ್ರಮಾಂಕಕ್ಕೆ ಬರಬೇಕು. ವಿವಿಧ ಆರೋಗ್ಯ ಕಾರ್ಯಕ್ರಮಗಳು ಅನುಷ್ಠಾನವಾಗಬೇಕು. ಹಾಡಿ, ಅರಣ್ಯದಂಚಿನ ಜನರಿಗೆ ಆರೋಗ್ಯ ಸೌಕರ್ಯಗಳು ಲಭಿಸುವಂತೆ ನೋಡಿಕೊಳ್ಳಬೇಕು. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಎಲ್ಲಾ ಕಾರ್ಯಗಳನ್ನು ಅಧಿಕಾರಿಗಳು ನಿರ್ವಹಿಸಬೇಕು ಎಂದು ಸೂಚಿಸಿದರು.

ಪ್ರವಾಹ ಸಂದರ್ಭದಲ್ಲಿ ಜಿಲ್ಲೆಯ ಅಧಿಕಾರಿಗಳ ತಂಡ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ವಿಪತ್ತು ನಿರ್ವಹಣಾ ಸಮಯದಲ್ಲಿ ಒಂದು ತಂಡವಾಗಿ ಇದೇ ರೀತಿ ಪ್ರತಿಯೊಂದು ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ. ಜನರಿಗೆ ಸ್ಪಂದಿಸಿ ನೆರವಾಗಿ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ವಯನಾಡು ಗುಡ್ಡಕುಸಿತ ಪ್ರಕರಣದಲ್ಲಿ ಜಿಲ್ಲಾಡಳಿತ ತ್ವರಿತವಾಗಿ ಸ್ಪಂದಿಸಿದೆ. ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸಹಾಯವಾಣಿ ತೆರೆದು ಬೇರೆ ಬೇರೆ ಭಾಗಗಳಿಂದ ಬಂದ ಕರೆಗಳನ್ನು ಸ್ವೀಕರಿಸಿ ಅವರ ನೆರವಿಗೆ ಮುಂದಾಗಿದೆ. ಜಿಲ್ಲೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ವೈದ್ಯರ ತಂಡವನ್ನು ವಯನಾಡಿಗೆ ಕಳುಹಿಸಲಾಗಿತ್ತು. ಇಲ್ಲಿನ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಸಂತ್ರಸ್ತ ಜನರಿಗೆ ಸಹಾಯ ಮಾಡಿದ್ದಾರೆ ಎಂದು ವಿವರಿಸಿದರು.

ಸಭೆಗೂ ಮೊದಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರವಾಹ ಸಮಸ್ಯೆಯ ಗ್ರಾಮಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು. ಸಭೆಯಲ್ಲಿ ಜಿಪಂ ಸಿಇಒ ಮೋನಾ ರೋತ್, ಎಸ್ಪಿ ಡಾ.ಬಿ.ಟಿ.ಕವಿತಾ, ಉಪವಿಭಾಗಾಧಿಕಾರಿ ಮಹೇಶ್, ಜಂಟಿ ಕೃಷಿ ನಿರ್ದೇಶಕ ಆಬೀದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಶಿವಪ್ರಕಾಶ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ಎಂ.ವಿ.ಸುಧಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಸೇರಿದಂತೆ ತಾಲೂಕು ಅಧಿಕಾರಿಗಳು, ಪ್ರವಾಹ ಸಂಬಂಧಿ ಗ್ರಾಮಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಭಾಗವಹಿಸಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ