ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಆರ್‌ಪಿಸಿ ಹುದ್ದೆಗಳಿಗೆ ಸೆಪ್ಟೆಂಬರ್ ೧೪ ಮತ್ತು ೧೫ರಂದು ಹಾವೇರಿ ನಗರದ ಎಂಟು ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.
ಸಿಸಿ ಟಿವಿ ಕಡ್ಡಾಯ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ಜಾಮರ್ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ವೀಕ್ಷಕರು ಈ ಕುರಿಂತೆ ಪೂರ್ವ ಪರಿಶೀಲನೆ ನಡೆಸಿ ನಿಯಮಾನುಸಾರ ಮೂಲ ಸೌಕರ್ಯಗಳ ಕುರಿತಂತೆ ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದರು.ಪರೀಕ್ಷೆಗೆ ನಿಯೋಜಿತ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ ಅವರು, ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲೇ ಪ್ರಶ್ನೆ ಪತ್ರಿಕೆ ತೆರೆಯುವುದು ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡಬೇಕು ಎಂದು ಸೂಚನೆ ನೀಡಿದರು.
ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಚೆ ಕಚೇರಿ ಅಧಿಕಾರಿಗಳು, ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.