- ಲಂಚಗುಳಿತನಕ್ಕೆ ಕಡಿವಾಣ ಹಾಕಲು ಡಿಸಿಗೆ ಎಸ್‌ಡಿಪಿಐ ಮನವಿ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಗರ್ಭಿಣಿಯರ ಸಾವು ಹಾಗೂ ಭ್ರಷ್ಟಾಚಾರ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಸಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಸಾವಿರಾರು ಜನರು ಚಿಕಿತ್ಸೆಗೆ ಬರುತ್ತಿದ್ದಾರೆ. ಸರ್ಕಾರದಿಂದ ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಆಸ್ಪತ್ರೆಯಾಗಿದ್ದರೂ ಸಮರ್ಪಕ ಸಂಪನ್ಮೂಲದ ಬಳಕೆಯ ಕೊರತೆ ಎದ್ದುಕಾಣುತ್ತಿದೆ. ಪ್ರತಿನಿತ್ಯ ಆಸ್ಪತ್ರೆ ಮತ್ತು ಅಲ್ಲಿನ ವೈದ್ಯರು ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಿದ್ದಾರೆ. ನವೆಂಬರ್ ೨೮ರಂದು ನೂರ್ ಅಫ್‌ಶಾ ಎಂಬ ಗರ್ಭಿಣಿ ವೈದ್ಯರ ನಿರ್ಲಕ್ಷ್ಯದಿಂದ ಸಾವಿಗೀಡಾಗಿದ್ದಾರೆ. ಮೃತಳಿಗೆ ಇಬ್ಬರು ಸಣ್ಣ ಮಕ್ಕಳಿದ್ದು, ಜಿಲ್ಲಾಡಳಿತ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಮೇ 26ರಂದು ಲೋಕಾಯುಕ್ತರು ಭೇಟಿ ನೀಡಿ, ಪರಿಶೀಲನೆ ಮಾಡಿ ಅನೇಕ ಸೂಚನೆಗಳನ್ನು ನೀಡಿದ್ದರು. ಆದರೂ, ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯಾವೂ ಕಾರ್ಯರೂಪಕ್ಕೆ ಬಂದಿಲ್ಲ. ಹೆಣ್ಣುಮಗು ಜನಿಸಿದರೆ ₹1 ಸಾವಿರ, ಗಂಡುಮಗು ಜನಿಸಿದರೆ ₹20 ಸಾವಿರ ಲಂಚ ಕೊಟ್ಟರೆ ಮಾತ್ರ ಮಗುವನ್ನು ಕುಟುಂಬಕ್ಕೆ ಕೊಡುವ ಪದ್ಧತಿಯನ್ನು ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಮಾಡಿಕೊಂಡಿದ್ದಾರೆ. ಸದರಿ ಪ್ರಕರಣದ ಬಗ್ಗೆ ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರ ಗಮನಕ್ಕೂ ತಂದು ಮನವಿ ನೀಡಲಾಗಿದೆ ಎಂದು ತಿಳಿಸಿದರು.ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ ಜಿಲಾನ್ ಖಾನ್, ಕಾರ್ಯದರ್ಶಿ ಇಮ್ರಾನ್ ಮತ್ತಿತರರಿದ್ದರು.
- - --02ಎಸ್‌ಎಂಜಿಕೆಪಿ02:
ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಗರ್ಭಿಣಿ ಮಹಿಳೆಯರ ಸಾವು ಹಾಗೂ ಅಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಸಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.