ಲೋಕಸೇವಾ ಆಯೋಗದ ಪರೀಕ್ಷೆ ನ್ಯಾಯಸಮ್ಮತವಾಗಿ ನಡೆಸಿ: ಡಿಸಿ ಡಾ. ವಿದ್ಯಾಕುಮಾರಿ

KannadaprabhaNewsNetwork | Published : Aug 23, 2024 1:05 AM

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯ ಕುರಿತ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಆ.27ರಂದು ನಡೆಯುವ ಪೂರ್ವಭಾವಿ ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷೆಯನ್ನು ನಡೆಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2023ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳು ಆ.27ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆ ವರೆಗೆ ಪತ್ರಿಕೆ-2ರ ಪರೀಕ್ಷೆಗಳು ಎರಡು ಪಾಳಿಯಲ್ಲಿ ನಡೆಯಲಿದ್ದು, ನಿಷ್ಪಕ್ಷಪಾತವಾಗಿ ಪರೀಕ್ಷೆಯನ್ನು ನಡೆಸಲು ಜಿಲ್ಲೆಯ ಮುಖ್ಯ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಆದ್ಯತೆ ನೀಡಬೇಕು. ಆಯೋಗವು ನೀಡಿರುವ ಮಾರ್ಗಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ಗೊಂದಲ ಅನುಮಾನಕ್ಕೆ ಅನುವು ಮಾಡಿಕೊಡದೇ ಸುಲಲಿತವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗ್ಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷಾ ಆರಂಭವಾಗುವ ಎರಡು ಗಂಟೆಗಳ ಮೊದಲೇ ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಸ್ಮಾರ್ಟ್ ವಾಚ್ ಸೇರಿದಂತೆ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡೊಯ್ಯಲು ನಿಷೇಧವಿದೆ ಎಂದರು.

ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ತಪಾಸಣಾ ಸಿಬ್ಬಂದಿ ಮೊದಲ ಹಂತದಲ್ಲಿ ಮುಖ್ಯಗೇಟ್ ಬಳಿಯೇ ನಿಲ್ಲಿಸಿ ತಪಾಸಣೆ ಮಾಡಿದ ನಂತರವೇ ಒಳಗೆ ಬಿಡಬೇಕು. ಎರಡನೇ ಹಂತದಲ್ಲಿ ಪರೀಕ್ಷಾ ತಪಾಸಣೆ ನಡೆಸಿದ ಎಲ್ಲ ಅಭ್ಯರ್ಥಿಗಳ ಗುರುತಿನ ಚೀಟಿ, ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿ, ಅವರ ಅಭ್ಯರ್ಥಿತ್ವದ ಬಗ್ಗೆ ಖಚಿತಪಡಿಸಿಕೊಂಡ ನಂತರವೇ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿಸತಕ್ಕದ್ದು ಎಂದು ಹೇಳಿದರು.

ಅಭ್ಯರ್ಥಿಗಳು ಶೂ, ಸಾಕ್ಸ್ ಅನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಗಳನ್ನು ಧರಿಸಬಹುದಾಗಿದೆ. ಮಂಗಳ ಸೂತ್ರ ಮತ್ತು ಕಾಲುಂಗುರಗಳನ್ನು ಹೊರತುಪಡಿಸಿ ಯಾವುದೇ ಆಭರಣಗಳನ್ನು, ತುಂಬು ತೋಳಿನ ಶರ್ಟ್, ಸ್ವೆಟರ್‌ಗಳನ್ನು ಹಾಗೂ ಫೇಸ್‌ಮಾಸ್ಕ್ ಧರಿಸಿ ಬಂದಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶವಿಲ್ಲ ಎಂದ ಅವರು, ಪರೀಕ್ಷೆ ಬರೆಯಲಿರುವ ಅಂಗವಿಕಲ ಅಭ್ಯರ್ಥಿಗಳು ಅಂಗವೈಕಲ್ಯತೆ ಹೊಂದಿರುವ ಕುರಿತು ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಟಿ.ಸಿದ್ದಲಿಂಗಪ್ಪ, ಡಿಡಿಪಿಐ ಗಣಪತಿ, ಡಿಡಿಪಿಯು ಮಾರುತಿ, ಡಾ. ಜಿ. ಶಂಕರ್ ಕಾಲೇಜಿನ ಪ್ರಾಚಾರ್ಯರ ಪ್ರೊ. ಭಾಸ್ಕರ್ ಶೆಟ್ಟಿ ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Share this article