ಹಾವೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಮಾರ್ಚ್ 1ರಂದು ಜಿಲ್ಲೆಯ 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪದೋಷವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವರೆಗೆ ಜಿಲ್ಲೆಯಲ್ಲಿ ಎಲ್ಲ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಮಾಡಲಾಗಿದೆ. ಜಿಲ್ಲೆಗೆ ಕಪ್ಪು ಚುಕ್ಕೆಬರದಂತೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.12 ತಂಡ ರಚನೆ:ಪ್ರಶ್ನೆ ಪತ್ರಿಕೆ ಬಂಡಲ್ ತೆಗೆದುಕೊಂಡು ಹೋಗಲು ಪ್ರತಿ ತಾಲೂಕಿಗೂ ತಹಸೀಲ್ದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಿನ್ಸಿಪಾಲ್ ಒಳಗೊಂಡ ತ್ರಿ ಸದಸ್ಯ ಸಮಿತಿಯ 12 ತಂಡಗಳನ್ನು ನೇಮಕ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕಿಗೆ ನಿಗದಿಪಡಿಸಿದ ಸಮಯಕ್ಕೆ ಅನುಗುಣವಾಗಿ ತೆಗೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು.
ಬಂದೋಬಸ್ತ್:
ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಬಸವರಾಜ ಇಟ್ಟಿಗುಡಿ ಮಾತನಾಡಿ, ಪರೀಕ್ಷಾ ರೂಪರೇಷೆಗಳ ಮಾಹಿತಿ ನೀಡಿದರು ಹಾಗೂ ಜಿಲ್ಲೆಯಲ್ಲಿ 11,908 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ಜರುಗಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈಯರ್‌ಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲ್ಕುಲೇಟರ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.