ಸಮೀಕ್ಷೆ ಕಾರ್ಯ ಪರಿಣಾಮಕಾರಿಯಾಗಿ ನಿರ್ವಹಿಸಿ: ಪದ್ಮಾವತಿ

KannadaprabhaNewsNetwork |  
Published : Sep 19, 2025, 01:01 AM IST
17ಎಚ್‌ ಪಿಟಿ2- ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ವಿತರಿಸಿದರು. ಉಪನಿರ್ದೇಶಕಿ ಎಸ್.ಶ್ವೇತಾ ಮತ್ತಿತರರಿದ್ದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮಾಜಿ ದೇವದಾಸಿಯರ ಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಯಲ್ಲಿ ಯಾರೂ ಹೊರ ಉಳಿಯದಂತೆ ಸೇರ್ಪಡೆಗೊಳಿಸಲು ಮಹಿಳಾ ಅಭಿವೃದ್ಧಿ ಅಧಿಕಾರಿಗಳು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು.

ಬ್ಯಾಂಕುಗಳಿಂದ ಆರ್ಥಿಕ ಸಹಾಯ ಕೊಡಿಸಿ/ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ

ಕನ್ನಡಪ್ರಭ ವಾರ್ತೆ ಹೊಸಪೇಟೆ

ಜಿಲ್ಲೆಯಲ್ಲಿ ಮಾಜಿ ದೇವದಾಸಿಯರ ಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಯಲ್ಲಿ ಯಾರೂ ಹೊರ ಉಳಿಯದಂತೆ ಸೇರ್ಪಡೆಗೊಳಿಸಲು ಮಹಿಳಾ ಅಭಿವೃದ್ಧಿ ಅಧಿಕಾರಿಗಳು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಜಿಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು,

ರಾಜ್ಯದಲ್ಲಿ ದೇವದಾಸಿಯರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿ ರಾಜ್ಯ ಸರ್ಕಾರದಿಂದ ನಿಗಮದಲ್ಲಿ ಅಂದಾಜು ₹70 ಲಕ್ಷ ಅನುದಾನ ಕಲ್ಪಿಸಲಾಗುವುದು. ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಆರ್ಥಿಕ ಸಹಾಯ ಧನ ಬಿಡುಗಡೆಗೆ ಕ್ರಮವಹಿಸಲಾಗುವುದು. ದೇವದಾಸಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನದಲ್ಲಿರುವಂತೆ ಸರ್ಕಾರ ಪ್ರಾಶಸ್ತ್ಯ ನೀಡಲಾಗಿದೆ. ಈ ಹಿಂದೆ 1993-94 ಮತ್ತು 2007-08ರಲ್ಲಿ ದೇವದಾಸಿಯರ ಸಮೀಕ್ಷೆ ನಡೆಸಿದ್ದು, ಆ ಸಮೀಕ್ಷೆಯಲ್ಲಿ ಮಾಜಿ ದೇವದಾಸಿಯರು ಕೈಬಿಟ್ಟು ಹೋಗಿದ್ದಲ್ಲಿ ಈಗ ನಡೆಯುವ ಮರು ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಸ್ವಾಭಿಮಾನಿ, ಸ್ವಾವಲಂಬಿ ಬದುಕು ನಿರ್ವಹಿಸಲು ಅನೇಕ ಅವಕಾಶಗಳನ್ನು ನೀಡಿದೆ. ಹಾಗಾಗಿ ಸೆ.15ರಿಂದ ಆರಂಭವಾಗಿರುವ 45 ದಿನಗಳ ಅವಧಿಯಲ್ಲಿ ಸಮೀಕ್ಷೆ ಕಾರ್ಯದಲ್ಲಿ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಸದ್ಭಳಕೆ ಮಾಡಿಕೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳಿಗೆ ಬ್ಯಾಂಕುಗಳಿಂದ ಸಾಲ, ಸೌಲಭ್ಯ ವಿತರಿಸಲು ಅನಗತ್ಯ ದಾಖಲೆಗಳ ನೆಪಹೇಳಿ ಅಲೆದಾಡುಸುತ್ತಿರುವುದು ಹಾಗೂ ಸಾಲ ವಿತರಣೆಗೆ ವಿಳಂಬ ಮಾಡುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಲೀಡ್ ಬ್ಯಾಂಕು ವ್ಯವಸ್ಥಾಪಕರು ಕೂಡಲೇ ಪರಿಶೀಲಿಸಿ ವಿತರಣೆಗೆ ಮುಂದಾಬೇಕು. ನೊಂದ ಸಮುದಾಯಗಳ ಧ್ವನಿಯನ್ನು ರಾಜ್ಯ ಸರ್ಕಾರದ ಮಟ್ಟದಲ್ಲಿ ಮುಟ್ಟಿಸುವಂತಹ ಕೆಲಸವನ್ನು ಅಧಿಕಾರಿಗಳು ತಾತ್ಸಾರ ವಹಿಸದೇ ಕರ್ತವ್ಯ ನಿರ್ವಹಿಸಬೇಕು ಎಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೀರೇಂದ್ರ ಕುಮಾರ್ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಬ್ಯಾಂಕ್‌ಗಳಿಂದ ಕೇವಲ ಒಂದು ತಿಂಗಳು ಅವಧಿಯಲ್ಲಿ ಸಾಲ ಸೌಲಭ್ಯ ನೀಡಲು ಸೂಚಿಸಿದೆ. ಯಾವುದೇ ಬ್ಯಾಂಕಿನಲ್ಲಿ ಗ್ರಾಹಕರಿಗೆ, ಫಲಾನುಭವಿಗಳಿಗೆ ಸ್ಪಂದಿಸದಿರುವುದು, ಕಿರಿಕಿರಿ ಮಾಡಿದರೆ, ನಿಖರವಾಗಿ ಬ್ಯಾಂಕಿನ ಮಾಹಿತಿಯನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನೀಡಿದರೆ, ಅಂತಹ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುತ್ತದೆ ಎಂದರು.

ರಾಜ್ಯ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಸ್.ಶ್ವೇತಾ, ಜಿಲ್ಲಾ ನಿರೂಪಣಾಧಿಕಾರಿ ಎಚ್. ಮುದುಕಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೀರೇಂದ್ರ ಕುಮಾರ್, ನಿಗಮದ ಅಭಿವೃದ್ಧಿ ನೀರಿಕ್ಷಕ ಸುಧಾ ಚಿದ್ರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ