ಹಾವೇರಿ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಡಿ.7ರಂದು ಹಾವೇರಿ ಹಾಗೂ ರಾಣಿಬೆನ್ನೂರು ನಗರದ 24 ಕೇಂದ್ರಗಳಲ್ಲಿ ಜರುಗಲಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.ಸಿಸಿ ಟಿವಿ ಕಡ್ಡಾಯ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ, ಕೊಠಡಿಯೊಳಗೆ ಗಡಿಯಾರ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು. ಪರೀಕ್ಷಾ ವೀಕ್ಷಕರು ಈ ಕುರಿತಂತೆ ಪೂರ್ವ ಪರಿಶೀಲನೆ ನಡೆಸಿ ನಿಯಮಾನುಸಾರ ಮೂಲ ಸೌಕರ್ಯಗಳ ಕುರಿತಂತೆ ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದರು.ಪರೀಕ್ಷೆಗೆ ನಿಯೋಜಿತ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಬೇರೆಯವರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ ಅವರು, ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲೇ ಪ್ರಶ್ನೆ ಪತ್ರಿಕೆ ತೆರೆಯುವುದು ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡಬೇಕು ಎಂದು ಸೂಚನೆ ನೀಡಿದರು. ಒಂದು ವೇಳೆ ಬೇರೆ ಕೇಂದ್ರದ ಪರೀಕ್ಷಾರ್ಥಿ ತಮ್ಮ ಕೇಂದ್ರಗಳಿಗೆ ಬಂದರೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರ ನಿಯೋಜನೆಗೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್, ಡಿ.7 ರಂದು ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಹಾಗೂ ಇಂಟರನೆಟ್ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವಂತೆ ಆಯಾ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಡಿ.7ರಂದು ಬೆಳಗ್ಗೆ 9-30ರಿಂದ 12 ಗಂಟೆವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ 4-30ರ ವರೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗಿನ ಅವಧಿಯಲ್ಲಿ 2,715 ಹಾಗೂ ಮಧ್ಯಾಹ್ನ ಅವಧಿಯಲ್ಲಿ 7,535 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾ ನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾತನಾಡಿ, ಪರೀಕ್ಷಾ ಕೇಂದ್ರಗಳನ್ನು ಹೊರತುಪಡಿಸಿ ಉಳಿದ ಕೊಠಡಿಗಳಿಗೆ ಬೀಗ ಹಾಕಬೇಕು ಹಾಗೂ ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ. ಹಾಗಾಗಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗಳ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ನೀಡಬೇಕು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್., ಈವರೆಗೆ ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಲಾಗಿದೆ. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಯಶಸ್ವಿಯಾಗಿ ಪರೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ ಅವರು ಪರೀಕ್ಷೆ ರೂಪ ರೇಷೆಗಳನ್ನು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರುಚಿ ಬಿಂದಲ್, ತಹಸೀಲ್ದಾರ್ ಶರಣಮ್ಮ, ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.