ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏ. 23 ಮತ್ತು ಏ. 24ರಂದು ಬೆಳಗ್ಗೆ 8.30ರಿಂದ ಸಂಜೆ 5 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಗದಗ: ಜಿಲ್ಲೆಯಲ್ಲಿ ಏ. 23 ಹಾಗೂ 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ, ಅವ್ಯವಹಾರ ನಡೆಯದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲ ಸೌಲಭ್ಯಗಳು ಇರುವಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ತುರ್ತು ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದರು.ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏ. 23 ಮತ್ತು ಏ. 24ರಂದು ಬೆಳಗ್ಗೆ 8.30ರಿಂದ ಸಂಜೆ 5 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳ ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ, ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್ ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕೈ ಗಡಿಯಾರ, ಮೊಬೈಲ್ ಫೋನ್ ಮತ್ತು ಇತರೆ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಮೊಬೈಲ್ ಫೋನ್ , ಬ್ಲೂಟೂತ್, ಕ್ಯಾಲ್ಕುಲೇಟರ್, ವೈರ್‌ಲೆಸ್ ಸೆಟ್ಸ್, ಬುಕ್ಸ್, ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಸನಾಯಕ ಮಾತನಾಡಿ, ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಜರುಗಲಿದೆ. 3,533 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ಜರುಗಿಸಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದರು. ಸಭೆಯಲ್ಲಿ ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.