ಎಸ್‌ಐಆರ್‌ ಪ್ರಕ್ರಿಯೆ ಪಾರದರ್ಶಕವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಶ್ರೀಧರ್

KannadaprabhaNewsNetwork |  
Published : Jul 16, 2026, 03:00 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯ ಎಲ್ಲ 967 ಮತಗಟ್ಟೆಗಳಲ್ಲಿ ಬಿಎಲ್‌ಒಗಳು ಕಡ್ಡಾಯವಾಗಿ ಲಭ್ಯವಿದ್ದು, ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ನಮೂನೆಗಳ ಭರ್ತಿ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಗದಗ: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ನಿಖರ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಬೇಕು. ಯಾವುದೇ ಒಬ್ಬ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಸೇರ್ಪಡೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಚುನಾವಣಾ ಅಧಿಕಾರಿಗಳೊಂದಿಗೆ ಜರುಗಿದ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲ 967 ಮತಗಟ್ಟೆಗಳಲ್ಲಿ ಬಿಎಲ್‌ಒಗಳು ಕಡ್ಡಾಯವಾಗಿ ಲಭ್ಯವಿದ್ದು, ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ನಮೂನೆಗಳ ಭರ್ತಿ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ಎಲ್ಲ 967 ಮತಗಟ್ಟೆಗಳಲ್ಲೂ ಮತದಾರರ ಅನುಕೂಲ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಫಾರ್ಮ್ ಭರ್ತಿ ಮಾಡಲು ತಿಳಿಯದ ಸಾರ್ವಜನಿಕರಿಗೆ ನೆರವಾಗಲು ಸ್ವ- ಸಹಾಯ ಗುಂಪಿನ ಸದಸ್ಯರನ್ನು ಹಾಗೂ ಸ್ವಯಂ ಸೇವಕರನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮದುವೆಯ ನಂತರ ಹೆಸರು ಬದಲಾಗಿರುವ ಮಹಿಳೆಯರ ವಿವರಗಳು, ವಿಳಾಸ ಬದಲಾವಣೆ ಹಾಗೂ ಮರಣ ಹೊಂದಿದವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಯನ್ನು ಸ್ಥಳೀಯವಾಗಿ ಸೂಕ್ತ ತನಿಖೆ ಮತ್ತು ಕ್ರಾಸ್ ವೆರಿಫಿಕೇಶನ್ ಮೂಲಕವೇ ಖಚಿತಪಡಿಸಿಕೊಳ್ಳಬೇಕು ಎಂದರು.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಅಥವಾ ತಪ್ಪುಗಳಿದ್ದಲ್ಲಿ ಸಾರ್ವಜನಿಕರು ಆಯಾ ತಾಲೂಕಿನ ತಹಸೀಲ್ದಾರ್ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯು ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಪ್ರಕ್ರಿಯೆಯಾಗಿದೆ. ಜು. 20ರೊಳಗಾಗಿ ಎಲ್ಲ ಡಿಜಿಟೈಸೇಶನ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಮತ್ತು ವಿವರಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಚುನಾವಣಾ ತಹಸೀಲ್ದಾರ್ ಸಂತೋಷ ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳು ವರದಾನ: ಬಿಇಒ ಬಿ.ವಿ. ಪಾಟೀಲ
ಕೆರೆ, ಡ್ಯಾಂ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿ: ಗೌರವ ಗುಪ್ತಾ