ಸರ್ಕಾರ ಹೊಸದಾಗಿ 6 ನಿಮಮಗಳನ್ನು ಸ್ಥಾಪಿಸಿ ಸಮರ್ಪಕವಾಗಿ ಅನುದಾನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ವಿವಿಧ ನಿಗಮಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ ತಿಂಗಳಲ್ಲಿ ಮಳವಳ್ಳಿಗೆ ಆಗಮಿಸಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಹಾಗೂ ನಿವೇಶನ ಹಂಚಿಕೆ ಮಾಡಲಿದ್ದಾರೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಹಿಂದುಳಿದ ವರ್ಗಗಳ ನಿಗಮಗಳ ಸ್ವಾವಲಂಬಿ ಸಾರಥಿ ಹೊಲಿಗೆ ಯಂತ್ರ, ಗಂಗಾಕಲ್ಯಾಣ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಯ ಸಂಕೇತವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು.
ಸರ್ಕಾರ ಹೊಸದಾಗಿ 6 ನಿಮಮಗಳನ್ನು ಸ್ಥಾಪಿಸಿ ಸಮರ್ಪಕವಾಗಿ ಅನುದಾನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ವಿವಿಧ ನಿಗಮಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಜನರು ಬದುಕನ್ನು ವೈಯಕ್ತಿಕವಾಗಿ ರೂಪಿಸಿಕೊಳ್ಳುವ ವ್ಯವಸ್ಥೆಗೆ ಸರ್ಕಾರ ಮುನ್ನುಡಿ ಬರೆದಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ನೀಡಿದ ಎಲ್ಲಾ ಭರವಸೆ ಈಡೇರಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಜೊತೆಗೆ ನಾಲಾ ಆಧುನೀಕರಣ, ಗುಣಮಟ್ಟದ ವಿದ್ಯುತ್ ಪೂರೈಕೆ, ಆರು ತಿಂಗಳ ಒಳಗಾಗಿ ಶೇ. ನೂರರಷ್ಟು ಶುದ್ಧ ಕಾವೇರಿ ನೀರನ್ನು ಪ್ರತಿ ಮನೆಗೆ ತಲುಪಿಸಲಾಗುವುದು ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ತರಲಾಗಿದೆ ಎಂದರು.
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ನೀಡವಂತೆ ಮಲ್ಟಿಮೀಡಿಯಾ ಸೌಲಭ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲವಾಗುವಂತೆ ವೈಯಕ್ತಿಕ ಖರ್ಚಿನಲ್ಲಿ ಕಲಿಕ ಮಿತ್ರವನ್ನು ನೀಡಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆ ಗುಣಮಟ್ಟ ಯಾವ ರೀತಿ ಇದೆ ಎಂದು ತಿಳಿಯಲಿದೆ. ಮಂಡ್ಯ ಜಿಲ್ಲೆಯಲ್ಲಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಜಿಪಂ ಸಿಇಒ ನಂದಿನಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಪಾರವಾಗಿ ಶ್ರಮಿಸಿದ್ದಾರೆ ಎಂದರು.
ಮೈಷುಗರ್ ಉಳಿಸಲು ಕಾಂಗ್ರೆಸ್ ಸರ್ಕಾರದಿಂದ 113 ಕೋಟಿ ರು. ಅನುದಾನ ನೀಡಿದೆ. ಜಿಲ್ಲೆಗೆ ಎನ್‌ಡಿಎ ಪಕ್ಷಗಳ ಕೊಡುಗೆ ಏನು ಇಲ್ಲ. ಕಾಂಗ್ರೆಸ್ ನಾಯಕರು ಮನೆ ಮಕ್ಕಳಂತೆ ಯೋಜನೆಗಳ ಜೊತೆಯಲ್ಲಿ ಜನರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಹಿಂದುಳಿದ ವರ್ಗಗಳ ಇಲಾಖೆಯಿಂದ 22 ಹೊಲಿಗೆ ಯಂತ್ರ, 112 ಮಂದಿಗೆ ಸಾಲ ಸೌಲಭ್ಯ, 58 ಮಂದಿಗೆ ಗಂಗಕಲ್ಯಾಣ ಯೋಜನೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸರ್ಕಾರದಿಂದ ಸೌಲತ್ತು ಪಡೆದ ಫಲಾನುಭವಿಗಳು ಸಮರ್ಪಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ಕಟ್ಟಿಕೊಳ್ಳಬೇಕೆಂದು ಸಲಹೆ ನೀಡಿದರು.
ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಎಲ್ಲಾ ಸಮುದಾಯದ ಅಭಿವೃದ್ಧಿಗೆ, ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲತ್ತುಗಳನ್ನು ವಿತರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಈ ವೇಳೆ ತಾಪಂ ಇಒ ಶ್ರೀನಿವಾಸ್, ಮನ್ಮುಲ್ ನಿರ್ದೇಶಕರಾದ ಆರ್.ಎನ್ ವಿಶ್ವಾಸ್, ಕೃಷ್ಣೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು, ನಿರ್ದೇಶಕ ಕೆ.ಜೆ ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ ರಾಜು, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಅಧ್ಯಕ್ಷ ಮಾದೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಬೋರೇಗೌಡ ಸೇರಿದಂತೆ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.