ಕೌಶಲ್ಯ ಅಭಿವೃದ್ಧಿಯಿಂದ ಆತ್ಮವಿಶ್ವಾಸ: ಪ್ರೊ. ಅಶೋಕ ಸಂಗಪ್ಪ ಆಲೂರ

KannadaprabhaNewsNetwork | Published : Aug 16, 2024 12:47 AM

ಸಾರಾಂಶ

ಎರಡು ದಿನದ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ನಡೆಯಿತು. ಕೊಡಗು ವಿವಿ ಕುಲಪತಿ ಪ್ರೊ. ಅಶೋಕ್‌ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮತ್ತು ಗೊಂದಲವನ್ನು ಹೋಗಲಾಡಿಸುವಲ್ಲಿ ಕೌಶಲ್ಯ ಅಭಿವೃದ್ಧಿಯು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು.

ಕೊಡಗು ವಿಶ್ವವಿದ್ಯಾಲಯ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ, ಕೊಡಗು ಹಾಗೂ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಅಕಾಡೆಮಿ ವತಿಯಿಂದ ಎರಡು ದಿನದ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದರು.

ಔದ್ಯೋಗಿಕ ಕ್ಷೇತ್ರದಲ್ಲಿ ದಕ್ಷತೆ ಮತ್ತು ಪರಿಣಾಮಕಾರಿತ್ವಕ್ಕೆ ಕೌಶಲ್ಯ ಅಭಿವೃದ್ಧಿಯು ಕಾರಣವಾಗುತ್ತವೆ. ಯುವಕರಿಗೆ ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ತಿಳಿಸಿಕೊಡುವ ಜವಾಬ್ದಾರಿ ನಮ್ಮದಾಗಿದ್ದು, ಕೊಡಗು ವಿಶ್ವವಿದ್ಯಾಲಯದ ವತಿಯಿಂದ ಯುವಕರಿಗೆ ಅಗತ್ಯವಾದ ಕೌಶಲ್ಯಗಳನ್ನು ನೀಡುವ ಮೂಲಕ, ವಿದ್ಯಾರ್ಥಿಗಳಲ್ಲಿರುವ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಬಹುದು. ದೇಶ-ವಿದೇಶಗಳಲ್ಲಿ ಕೌಶಲ್ಯ ಅಭಿವೃದ್ಧಿ ಹೊಂದಿದ ಕೆಲಸಗಾರರಿಗೆ ಹೆಚ್ಚುತ್ತಿರುವ ಬೇಡಿಕೆಯು ಅದರ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಮೊದಲ ಬಾರಿಗೆ ವಿಶ್ವವಿದ್ಯಾಲಯವೊಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕೌಶಲ್ಯಾ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಸ್ವಾವಲಂಬಿ ದಿನವನ್ನಾಗಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ತಾರಾನಾಥ ಟಿ. ಸಿ. ಅವರು, ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಆರ್. ಗಂಗಾಧರ್‌ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಕಾಲೇಜು ಶಿಕ್ಷಣ ಇಲಾಖೆಯ ಉದ್ಯೋಗ ಘಟಕದ ರಾಜ್ಯ ನೋಡಲ್ ಅಧಿಕಾರಿಗಳಾದ ಡಾ. ನಾರಾಯಣ ಪ್ರಸಾದ್‌ ಅವರು ಮತ್ತು ಅಪೂರ್ವ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಉದ್ಯೋಗ ಕ್ಷೇತ್ರಗಳಲ್ಲಿರುವ ಅವಕಾಶಗಳ ಬಗೆಗೆ ವಿಶೇಷ ಉಪನ್ಯಾಸ ನೀಡಿದರು.

ಇದೇ ಸಂದರ್ಭ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಸೀನಪ್ಪಅವರು, ಬೋಧಕ ಮತ್ತು ಬೋಧಕೇತರ ವೃಂದ, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share this article