ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ನೀತಿಯ ರಾಜಕಾರಣವನ್ನು ಶೈಕ್ಷಣಿಕ ಕ್ಷೇತ್ರಕ್ಕೂ ವಿಸ್ತರಿಸಿ ಶಿಕ್ಷಕ ವೃಂದಕ್ಕೇ ಅಪಚಾರ ಎಸಗಿದೆ. ಶಿಕ್ಷಕರ ಜೊತೆಗೆ ಉಡುಪಿ ಜಿಲ್ಲೆಯನ್ನು ಅವಮಾನಿಸಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.ಅವರು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಶಿಕ್ಷಕರ ಸಾಧನೆಯ ಆಧಾರದಲ್ಲಿ ಸರ್ಕಾರ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಘೋಷಿಸುವ ಪರಿಪಾಠ ಇದ್ದರೂ, ಕಾಂಗ್ರೆಸ್ ಸರ್ಕಾರ ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಯನ್ನು ಘೋಷಿಸಿ, ನಂತರ ಮುಸ್ಲಿಂ ಓಲೈಕೆ ರಾಜಕಾರಣಕ್ಕಾಗಿ ತಡೆಹಿಡಿದಿದೆ. ಇಂದು ಖಂಡನೀಯ ಎಂದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ನಗರ ಮಹಿಳಾ ಮೋರ್ಚಾ ಹಮ್ಮಿಕೊಂಡಿರುವ ಸಾಧಕ ಶಿಕ್ಷಕರಿಗೆ ಗುರುವಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸುಬ್ರಾಯ ಉಪಾಧ್ಯಾಯ (ಶಿಕ್ಷಣ), ರತ್ನಾಕರ ಶೆಣೈ (ಯಕ್ಷಗಾನ), ಅನಿತಾ ಡಿ. ಸುವರ್ಣ (ಯೋಗ), ಗಂಗಾಧರ್ ಕಡೆಕಾರ್ (ಈಜು), ಮೀನಾಕ್ಷಿ ಪೈ (ಭಗವದ್ಗೀತೆ), ವಿನುತಾ ಆಚಾರ್ಯ (ಸಂಗೀತ), ರವಿರಾಜ್ ಉಪಾಧ್ಯಾಯ (ವಾದ್ಯ), ಗಣೇಶ್ ಕೋಟ್ಯಾನ್ (ಕ್ರೀಡೆ), ಶಿವಣ್ಣ (ಹುಲಿವೇಷ), ಸಿರಿಲ್ ನೊರೋಹ್ನ (ತಾಲೀಮು ಕವಾಯತು) ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪೆರಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರೆ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತಿ ಮನೋಜ್ ಕಾರ್ಯಕ್ರಮ ನಿರೂಪಿಸಿ, ಸರೋಜಾ ಶೆಣೈ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.