ಕನ್ನಡಪ್ರಭ ವಾರ್ತೆ ನಾಗಮಂಗಲ
ಹಳ್ಳಿಗಳಲ್ಲಿ ರೋಡ್ ಶೋ ನಡೆಸಿದ ಸ್ಟಾರ್ ಚಂದ್ರು ಅವರು, ಜಿಲ್ಲೆಯ ಮತ್ತು ರಾಜ್ಯದ ಹಿತ ಕಾಯಲು ಮತದಾರರು ನನ್ನನ್ನು ಬೆಂಬಲಿಸಬೇಕು. ನನ್ನ ಗೆಲುವು ರೈತರ ಗೆಲುವು, ಜಿಲ್ಲೆಯ ಜನತೆಯ ಗೆಲುವು ಎಂದರು.
ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಸದೃಢ ಭಾರತ ನಿರ್ಮಾಣದ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆಗಳನ್ನು ನೆನೆದು ಜನಸೇವೆ ಮಾಡಲು ನನಗೊಂದು ಅವಕಾಶ ನೀಡಬೇಕೆಂದು ಮನವಿ ಮಾಡಿದರು.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಆಗಲಿದೆ. ದುಡಿಯುವ ಕೈಗೆ ಉದ್ಯೋಗ ಸಿಗಲಿದೆ. ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 7 ಶಾಸಕರನ್ನು ಹಾರಿಸಿ ಕಳುಹಿಸಿದ್ದೀರಿ. ಲೋಕಸಭಾ ಚುನಾವಣೆಯಲ್ಲಿ ಮತ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ಜೋಗಿಪುರ ಗ್ರಾಮದ ಕೆಂಪರಾಜು, ಸಿದ್ದರಾಜು ಸೇರಿದಂತೆ ಹಲವರು ಪಕ್ಷಕ್ಕೆ ಬರಮಾಡಿಕೊಂಡ ನಂತರ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಗೆಲುವು ನಿಶ್ಚಿತ. ಜಿಲ್ಲೆಯ ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಜನರ ಸಂಕಷ್ಟಕ್ಕೆ ನೆರವಾಗಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಸಹ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ನುಡಿದಂತೆ ನಡೆಯಲಿದ್ದೇವೆ. ಕೇಂದ್ರದಲ್ಲಿ ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.