ಅಹಿಂದ ಮತ್ತು ಇತರ ಮತದಾರರು ಕೈ ಪರ ಇದ್ದಾರೆ । ನನಗೆ ಲೋಕಸಭೆ ಟಿಕೆಟ್ ನೀಡಿ
ಲೋಕಸಭೆ ಚುನಾವಣೆ ಸಮೀಪದಲ್ಲಿದ್ದು, ಈಗಾಗಲೇ ಮುಖಂಡರ ಜತೆ ಚರ್ಚೆ ಮಾಡಲಾಗಿದೆ. ಕಾಂಗ್ರೆಸ್ ಸಂಘಟನೆಗಾಗಿ ಅತಿ ಶೀಘ್ರದಲ್ಲಿ ಪಕ್ಷದ ಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳುವುದಾಗಿ ಪಕ್ಷದ ಮುಖಂಡ ವಿನಯಗಾಂಧಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಲೋಕಸಭಾ ಚುನಾವಣೆ ಹತ್ತಿರವಿರುವುದರಿಂದ ಈಗ ಜಿಲ್ಲೆಯ ಎಲ್ಲಾ ತಾಲೂಕಿಗೂ ಭೇಟಿ ನೀಡಿ ಎಲ್ಲಾ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಲಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದಿಂದ ಚುನಾವಣೆಗೆ ಮುಂಚೆ ಭರವಸೆ ನೀಡಿದ ಎಲ್ಲಾ ೫ ಗ್ಯಾರಂಟಿಗಳನ್ನು ಜಾರಿ ಮಾಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೂ ಅನುಕೂಲ ಮಾಡಲಾಗಿದೆ. ಇದರ ಲಾಭವನ್ನು ಎಲ್ಲಾ ವರ್ಗದ ಜನರಿಗೂ ಮತ್ತು ಎಲ್ಲಾ ಧರ್ಮದ ಜನರಿಗೂ ಸರ್ಕಾರದ ಸವಲತ್ತುಗಳನ್ನು ತಲುಪಿಸುತ್ತಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಮತದಾರರಿದ್ದು, ಇದರಲ್ಲಿ ಅಹಿಂದ ಮತದಾರರು ಮತ್ತು ಇತರರು ಇದ್ದಾರೆ. ಇವರೆಲ್ಲ ಕಾಂಗ್ರೆಸ್ ಪರವಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎಲ್ಲಾ ಜನಾಂಗದ ಪರವಾಗಿದೆ ಎಂದು ಎಲ್ಲಾರಿಗೂ ಮನವರಿಕೆಯಾಗಿದೆ ಎಂದು ಹೇಳಿದರು.ಹಾಸನ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಕೂಡ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ಮಾಡಿ ಸಾರ್ವಜನಿಕರು ಕಾರ್ಯಕರ್ತರ ಅವಹಾಲುಗಳನ್ನು ಕೇಳಿ ಅವರ ಅವಶ್ಯಕತೆಗಳನ್ನು ಪೂರ್ಣಗೊಳಿಸುತ್ತಿರುವುದು ಜಿಲ್ಲೆಯ ಕಾರ್ಯಕರ್ತರಿಗೆ ಸಂತೋಷ ತಂದಿದೆ. ಹಾಸನ ಲೋಕಸಭೆಗೆ ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿ ಜೆಡಿಎಸ್, ಬಿಜೆಪಿ ಕೋಮುವಾದಿ ಸಮ್ಮಿಶ್ರ ಪಕ್ಷದ ಅಭ್ಯರ್ಥಿ ಯಾರೇ ಆದರೂ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುತ್ತಿದ್ದಾರೆ, ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಟ್ಟಿದೇವೆ. ಜಿಲ್ಲೆಯಲ್ಲಿ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಂದಾಗಿದ್ದು ಕಾಂಗ್ರೆಸ್ ಪಕ್ಷವನ್ನು ತಳಹಂತದಿಂದ ಸಂಘಟನೆ ಮಾಡಲು ತಯಾರಾಗಬೇಕಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಜನಾಂಗದವರು ಜಾತಿಯವರು ಧರ್ಮದವರು ಒಗ್ಗೂಡಿ ಕೆಲಸ ಮಾಡಬೇಕು. ನಮ್ಮಲ್ಲಿ ಎಲ್ಲರೂ ಕೂಡಿ. ಒಟ್ಟಿಗೆ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಬೇಕಾಗಿದೆ ಎಂದು ತಿಳಿಸಿದರು.
ಈಗ ರಾಜ್ಯ ಸರ್ಕಾರದ ನಿಗಮ ಮಂಡಳಿಯಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಯ ನಾಮನಿರ್ದೇಶನ ನಡೆಯುತ್ತಿರುವುದರಿಂದ ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರು ಬಹಳ ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿರುವ ಹಿರಿಯರು ಮತ್ತು ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಜಾತಿವಾರು, ಧರ್ಮವಾರು ಅಭ್ಯರ್ಥಿಗಳನ್ನು ಗುರುತಿಸಿ ಅವಕಾಶ ಮಾಡಿಕೊಡಬೇಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.