ಕೊಪ್ಪಳ: ಮುಂಬರುವ ಜಿಪಂ, ತಾಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆ ಬಲಪಡಿಸಿ, ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಚುನಾವಣೆಯನ್ನು ಎದುರಿಸಲಾಗುವುದು ಎಂದು ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.
ಸ್ಥಳೀಯ ಚುನಾವಣೆಗಳಿಗೆ ಒತ್ತು: ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪಕ್ಷವನ್ನು ಸಂಘಟನಾತ್ಮಕವಾಗಿ ಸಜ್ಜುಗೊಳಿಸಲಾಗುವುದು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.
ಕುಷ್ಟಗಿ–ಯಲಬುರ್ಗಾ ಬರಪೀಡಿತ ಪಟ್ಟಿಗೆ: ಕೊಪ್ಪಳ ಜಿಲ್ಲೆಯ ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದ ಮಲ್ಲಿಕಾರ್ಜುನ ನಾಗಪ್ಪ, ಈ ಕುರಿತು ಈಗಾಗಲೇ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಅವರೊಂದಿಗೆ ಚರ್ಚಿಸಲಾಗಿದೆ. ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕುಗಳ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಪರಿಹಾರ ಹಾಗೂ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಲಾಗುವುದು ಎಂದರು.ತುಂಗಭದ್ರಾ ಕಾಡಾ ನಿಗಮದ ಅಧ್ಯಕ್ಷ ಹಸನಸಾಬ್ ದೋಟಿಹಾಳ ಅವರು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಗೌರವಿಸಿದರು.