ಕನ್ನಡಪ್ರಭ ವಾರ್ತೆ ಬಳ್ಳಾರಿ
ಕಾಂಗ್ರೆಸ್ ಸರ್ಕಾರದಲ್ಲಿ ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರ ಮಿತಿ ಮೀರಿದೆ. ವಿವಿಧ ಇಲಾಖೆಗಳಲ್ಲಿ ಲಂಚಗುಳಿತನ ತುಂಬಿ ತುಳುಕುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಸತಿ ಯೋಜನೆಯಲ್ಲಾಗಿರುವ ಭ್ರಷ್ಟಾಚಾರ ಕುರಿತು ಕಾಂಗ್ರೆಸ್ ಶಾಸಕರೇ ಮಾಧ್ಯಮಗಳಿಗೆ ದೂರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಯಾವ ಕೆಲಸಗಳು ಆಗುತ್ತಿಲ್ಲ ಎಂದು ಆಡಳಿತಾರೂಢ ಶಾಸಕರು ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದು, ಈ ಸರ್ಕಾರ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂಬುದು ಬಹಿರಂಗವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಮಾತನಾಡಿ, ರಾಜ್ಯದ ಜನರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಹಣ ನೀಡದ ಸ್ಥಿತಿಯಲ್ಲಿದೆ. ಆರ್ಥಿಕ ಅಶಿಸ್ತಿನಿಂದಾಗಿ ಕಾಂಗ್ರೆಸ್ ಸರ್ಕಾರ ಜನಕಲ್ಯಾಣ ಕಾರ್ಯಕ್ರಮಗಳಿಗೆ ಹಣ ವಿನಿಯೋಗಿಸದ ಸ್ಥಿತಿಯಲ್ಲಿ ಒದ್ದಾಡುತ್ತಿದೆ. ರೈತರ ಹಿತ ಕಾಯುವ ಯಾವುದೇ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ರೂಪಿಸಲಿಲ್ಲ. ಪರಿಶಿಷ್ಟ ಸಮುದಾಯಕ್ಕೆ ಮೀಸಲಾಗಿದ್ದ ಹಣ ದುರುಪಯೋಗ ಮಾಡಿಕೊಳ್ಳಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಯಾವ ಪಶ್ಚತ್ತಾಪವೂ ಇಲ್ಲ. ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದಾಗಿಯೇ ಬೆಂಗಳೂರಿನಲ್ಲಿ ಜರುಗಿದ ಐಪಿಎಲ್‌ನ ಆರ್‌ಸಿಬಿ ವಿಜಯೋತ್ಸವ ಸಮಾರಂಭದಲ್ಲಾದ ಕಾಲ್ತುಳಿತಕ್ಕೆ ಅನೇಕರು ಬಲಿಯಾಗಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಫಲಾನುಭವಿಗಳ ಆಯ್ಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ದ ಕಾಂಗ್ರೆಸ್ ಶಾಸಕರೇ ಆಪಾದನೆ ಮಾಡಿದ್ದು, ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಯಾವುದೇ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳುವ ಬದಲು ಜನರನ್ನು ವಂಚಿಸುವ ಕೆಲಸ ಮಾಡಿದೆ ಎಂದು ಆರೋಪಿಸಿದರು.ನಗರದ ಕೃಷ್ಣಮಾಚಾರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಗಡಗಿಚನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತೆರಳಿ, ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪಕ್ಷದ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜು ನಾಯಕ್, ರೈತ ಘಟಕದ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾ, ಪ್ರಮುಖ ಮುಖಂಡರಾದ ಶಿವನಾರಾಯಣ, ಮೇಘರಾಜು, ಹೊನ್ನೂರಸ್ವಾಮಿ, ಅಶೋಕ್, ಜಮೀಲಾ, ಕಿರಣ್, ಮುತ್ತು ಸೇರಿದಂತೆ ಪಕ್ಷದ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿವಿಧ ತಾಲೂಕುಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.