ಕಾರವಾರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಯೋಜನೆಯಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಂತಹ ಆಡಳಿತವನ್ನು ನಡೆಸುವ ಬದಲು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಗ್ದಾಳಿ ಮಾಡಿದ್ದಾರೆ.
ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ ಜಾರಿಗೊಳಿಸಲು ಹೊರಟಿರುವುದನ್ನು ಓಲೈಕೆ ರಾಜಕಾರಣದ ಪರಮಾವಧಿ. ಈ ನಿರ್ಧಾರವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬೇಜವಾಬ್ದಾರಿ ಆಡಳಿತಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಅನುದಾನ ಬಿಡುಗಡೆಗಾಗಿ ಲಂಚ ಕೇಳಲಾಗುತ್ತಿದೆ ಎಂಬ ಆರೋಪಗಳಿದ್ದು, ಈ ಬಗ್ಗೆ ತನಿಖೆ ನಡೆಯಬೇಕು. ಭ್ರಷ್ಟಾಚಾರವನ್ನು ನಿಯಂತ್ರಿಸದಿದ್ದರೆ ಮುಖ್ಯಮಂತ್ರಿ ರಾಜೀನಾಮೆ ನೀಡುವುದೇ ಸೂಕ್ತ ಪರಿಹಾರ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಸಚಿವ ಸಂಪುಟವೇ ಹಿಂದಿನ ವರದಿಯನ್ನು ತಿರಸ್ಕರಿಸಿದ ನಂತರ, ಮತ್ತೊಂದು ಹೊಸ ಜಾತಿ ಗಣತಿ ನಡೆಸಲು ಹೊರಟಿರುವುದು ಮೂರ್ಖತನದ ಪರಮಾವಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ದುರುಪಯೋಗ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ಈಗಾಗಲೇ ಜಾತಿ ಗಣತಿ ನಡೆಸಲು ಸಿದ್ಧತೆ ನಡೆಸುತ್ತಿದ್ದು, ರಾಜ್ಯ ಸರ್ಕಾರವು ಅದಕ್ಕೆ ಸಹಕಾರ, ಸಲಹೆ ಮತ್ತು ಸೂಚನೆಗಳನ್ನು ನೀಡುವುದು ಹೆಚ್ಚು ಉತ್ತಮ. ಈ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.