ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ರಾಜ್ಯದ ಕಾಂಗ್ರೆಸ್ ಸರ್ಕಾರ ಪದವೀಧರರ ಪರವಾಗಿ ಕಾರ್‍ಯ ನಿರ್ವಹಿಸುತ್ತಿದ್ದು, ಗ್ಯಾರಂಟಿ ಯೋಜನೆಗಳಲ್ಲಿ ಜಾರಿಗೆ ತಂದಿರುವ ಯುವನಿಧಿ ಯೋಜನೆಯೇ ನಿದರ್ಶನವಾಗಿದೆ. ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಉತ್ತಮ ಆಡಳಿತ ನೀಡಲು ಅನುವು ಮಾಡಿಕೊಡಬೇಕಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಮನವಿ ಮಾಡಿದ್ದಾರೆ.ನಗರದ ಕಾಂಗ್ರೆಸ್ ಕಾರ್‍ಯಾಲಯದಲ್ಲಿ, ವಿಧಾನ ಪರಿಷತ್ ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡ ಅವರ ಪರವಾಗಿ ಮತಯಾಚಿಸಿ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡುತ್ತಿದ್ದಾರೆ. 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಈ ಹಿಂದೆ ದೇವರಾಜ ಅರಸು ಮುಖ್ಯಮಂತ್ರಿಗಳಾಗಿದ್ದಾಗ ಪದವೀಧರರಿಗೆ ಶಿಷ್ಯ ವೇತನವನ್ನು ನೀಡುವ ಯೋಜನೆ ರೂಪಿಸಲಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಅನುದಾನಿತ ಶಾಲೆಗಳ ಸಮಸ್ಯೆ, ವೇತನ ತಾರತಮ್ಯ ಮೊದಲಾದ ಸಮಸ್ಯೆಗಳಿದ್ದವು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಶಾಲೆಗಳಿಗೆ 11494 ಶಿಕ್ಷಕರ ನೇಮಕಾತಿ, 35 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಅತ್ಯುತ್ತಮ ಸಾಧನೆಗೈದ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರು.ಳಂತೆ ಒಟ್ಟು 350 ಕೋಟಿ ರು. ಅನುದಾನ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಕನಿಷ್ಠ 5 ಸಾವಿರ ರು.ಗಳಿಂದ ಗರಿಷ್ಠ 8 ಸಾವಿರ ರು.ಗಳಿಗೆ ವೇತನ ಹೆಚ್ಚಳ ಮಾಡಲಾಗಿದೆ. 5 ಲಕ್ಷ ರು. ವೈದ್ಯಕೀಯ ಸೌಲಭ್ಯ ಹಾಗೂ 60 ವರ್ಷದ ನಂತರ ನಿವೃತ್ತಿಯಾಗುವಾಗ ಬರಿಗೈಯಿಂದ ಕಳುಹಿಸದೇ 5 ಲಕ್ಷ ರು.ಗಳ ಇಡಿ ಗಂಟು ನೀಡಲಾಗುವುದು ಎಂದರು.19 ಸಾವಿರ ಎನ್.ಪಿ.ಎಸ್ ಯೋಜನೆಯಲ್ಲಿದ್ದ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ಒಳಪಡಿಸಲಾಗಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿ ಭತ್ಯೆ ನೀಡಿದ ಕ್ಷಣಾರ್ಧದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಗೊಂದಲದ ಗೂಡಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ತರಲು ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡ ಅವರು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ನಿರತರಾಗಿದ್ದು, ಜೂನ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸಬೇಕೆಂದು ಮನವಿ ಮಾಡಿದರು.ಇಂದು ಬಹಿರಂಗ ಸಭೆ:ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡ ಅವರು ನಗರದ ಒಕ್ಕಲಿಗರ ಭವನದಲ್ಲಿ ಮೇ.28ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದು, ಪದವೀಧರ ಕ್ಷೇತ್ರದ ಚುನಾವಣೆಗೆ ಮತಯಾಚನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್‍ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತ ರಾಜು, ಕಾಂಗ್ರೆಸ್ ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಕಾಂತರಾಜು ಹಾಜರಿದ್ದರು.