ಚಿತ್ರದುರ್ಗ : ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಕಾಂಗ್ರೆಸ್ ಹಾಳು ಗೆಡವಲು ಮುಂದಾಗಿದ್ದು, ಅಪಾಯದಲ್ಲಿರುವ ಶಿಕ್ಷಣ ಇಲಾಖೆಯ ಕಿವಿ ಹಿಂಡಿ ಸರಿದಾರಿಗೆ ತರಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ್ ವಿನಂತಿಸಿದರು.
ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕನೆ ಬಾರಿಗೆ ಸ್ಪರ್ಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿರವರನ್ನು ಗೆಲ್ಲಿಸಿದರೆ ಶಿಕ್ಷಕರ ಸಮಸ್ಯೆಗಳಿಗೆ ಗಟ್ಟಿ ಧ್ವನಿಯಾಗಿ ಸದನದಲ್ಲಿ ಮಾತನಾಡುವರು. ರಾಜ್ಯ ಸರ್ಕಾರದ ದುರಾಡಳಿತದಿಂದ ಕೇವಲ ಶಿಕ್ಷಕರುಗಳಷ್ಟೆ ಅಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಇಲಾಖೆಯ ಅಧಿಕಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಮೆಸೇಜ್, ವಾಟ್ಸಪ್, ಆನ್‍ಲೈನ್ ಮೂಲಕ ಶಿಕ್ಷಣ ಸಚಿವರು ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಶಿಕ್ಷಣ ಇಲಾಖೆ ಒನ್‍ವೇ ಟ್ರಾಫಿಕ್‍ನಲ್ಲಿ ನಡೆಯುತ್ತಿದೆ ಎಂದು ಆಪಾದಿಸಿದರು.
ರಾಜ್ಯದಲ್ಲಿ ಐವತ್ತೆರಡು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ತನಿಖೆ ನಡೆಸಿ ಅಮಾನತ್ತಿಗೆ ಶಿಫಾರಸ್ಸು ಮಾಡಿದೆ. 152 ಶಿಕ್ಷಣಾಧಿಕಾರಿಗಳ ಮೇಲೆ ಕ್ರಮಕ್ಕೆ ಶಿಫಾರಸ್ಸು ಮಾಡಿದೆ. ಶಿಕ್ಷಣಾಧಿಕಾರಿಗಳನ್ನು ಬೆದರಿಸಿ ಭ್ರಷ್ಟಾಚಾರದ ಅಪೇಕ್ಷೆಯಿಟ್ಟುಕೊಂಡು ಕಾಂಗ್ರೆಸ್ ಗದಾಪ್ರಹಾರ ಮಾಡುತ್ತಿದೆ. ಡಯಟ್‍ಗಳಲ್ಲಿನ ಹುದ್ದೆಗಳನ್ನು ಕಡಿಗೊಳಿಸುವ ಹುನ್ನಾರ ನಡೆಸುತ್ತಿದೆ. ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ನಿರ್ಮಿಸಲು ಹೊರಟಿರುವುದರಿಂದ ಶಿಕ್ಷಣಾಧಿಕಾರಿಗಳ ನೈತಿಕತೆ ಕುಸಿದು ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹದಗೆಟ್ಟು ಕೋರ್ಟ್‍ಗಳಲ್ಲಿ ಛೀಮಾರಿ ಹಾಕಿಸಿಕೊಳ್ಳುತ್ತಿದೆ. ಶಿಕ್ಷಣದ ಪ್ರಭಾವ ತಗ್ಗಿಸುವ ಕೆಲಸ ಇದಾಗಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಒಂದೆ ಒಂದು ಶಾಲೆ ಕಟ್ಟಿಸುವ ಪ್ರಯತ್ನ ಮಾಡಿಲ್ಲ. ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿರುವ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ತರಬೇಕಾಗಿರುವುದರಿಂದ ಮುಂದಿನ ತಿಂಗಳು ನಡೆಯಲಿರುವ ಮೂರು ಪದವೀಧರ ಕ್ಷೇತ್ರ ಹಾಗೂ ಮೂರು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಜಯಣ್ಣ, ಮಾಧ್ಯಮ ವಕ್ತಾರ ದಗ್ಗೆ ಶಿಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಪತ್ರಿಕಾಗೋಷ್ಟಿಯಲ್ಲಿದ್ದರು.