ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಗಳೇ ಇದಕ್ಕೆಲ್ಲ ಸಾಕ್ಷಿ. ಆದ್ದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ರಕ್ಷಕ ಸರ್ಕಾರ ಎಂದು ದೂರಿದರು.
ಯಾರಿಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುತ್ತದೆ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ, ಈ ಕುರಿತು ಪ್ರಧಾನಿಯೂ ಹೇಳಿಲ್ಲ, ಜೆ.ಪಿ. ನಡ್ಡಾ, ಅಮಿತ್ ಶಾ ಕೂಡ ಹೇಳಿಲ್ಲ. ಈ ಎಲ್ಲ ಸುದ್ದಿಗಳು ಊಹಾಪೋಹ ಎನಿಸುತ್ತದೆ. ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ. ಆಗ ಸತ್ಯ ಹೊರಬರಲಿದೆ ಎಂದರು. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಇದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭಗಳ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತಪ್ಪಿಸಲು ಪಿತೂರಿ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವಾಗ ವಿರೋಧ ವ್ಯಕ್ತವಾಗುತ್ತೋ, ಆಗಲೇ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳುತ್ತಾರೆ ಎಂದರು.
ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ, 10 ವರ್ಷಗಳ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇವೆ. ದೇಶದಲ್ಲಿ ಆಗಿರುವ ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಭಾಗಕ್ಕೆ ಸಿಕ್ಕ ನೆರವು ನಮ್ಮ ಶಕ್ತಿ. ನರೇಂದ್ರ ಮೋದಿ ಕಾರ್ಯಕ್ರಮಗಳು, ದೇಶದ ಬಗ್ಗೆ ಅವರಿಗಿರುವ ಕಳಕಳಿ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಅವರಿಗಿರುವ ದೂರದೃಷ್ಟಿ, ವಿದೇಶದಲ್ಲಿರುವ ಭಾರತೀಯರಿಗೆ ಗೌರವದ ದೂರದೃಷ್ಟಿ ಮೇಲೆ ಮತಯಾಚನೆ ಮಾಡುತ್ತೇವೆ ಎಂದರು.
ಈರುಳ್ಳಿ, ಟೊಮೆಟೊ ಸಲುವಾಗಿ ಸರ್ಕಾರ ಬಿದ್ದ ಉದಾಹರಣೆಗಳಿವೆ. ಅದಕ್ಕೆ ಖಾದ್ಯತೈಲ ಕಾಳು ಬೆಳೆಯಲು ರೈತರಿಗೆ ಉತ್ತೇಜನ ನೀಡಲಾಗುತ್ತಿದೆ. ಸಬ್ಸಿಡಿ ಆಧಾರದ ಮೇಲೆ ರೈತರಿಗೆ ಬೀಜ, ಟೆಕ್ನಾಲಜಿ ನೀಡುತ್ತಿದ್ದೇವೆ. ಯುಪಿಎ ಸಮಯದಲ್ಲಿನ ಲೋಪಗಳ ಗುಂಡಿ ಮುಚ್ಚಿ ಮೇಲೆದ್ದು ಬರಲು ನಮಗೆ ಸಮಯ ಬೇಕು. ಎಲ್ಲ ವಿಚಾರಗಳಲ್ಲಿ ಸ್ವಾವಲಂಬನೆ ಸಾಧಿಸಲು ಮೋದಿ ಕಾರ್ಯಪ್ರವೃತರಾಗುತ್ತಿದ್ದಾರೆ. ಈ ಮೊದಲು ನಾವು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿ ಇರಲಿಲ್ಲ, ಮದ್ದು, ಗುಂಡು ಆಚೆಯಿಂದ ಬರುತ್ತಿತ್ತು. ಇವತ್ತು ಭಾರತ ಸ್ವಾವಲಂಬಿಯಾಗುವತ್ತ ದಾಪುಗಾಲು ಇಡುತ್ತಿದೆ. ನಾವು ಬೇರೆ ದೇಶಕ್ಕೆ ರಪ್ತು ಮಾಡಲು ಯೋಚನೆ ಮಾಡಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ, ಪೊಲೀಸ್ ಇಲಾಖೆ, ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಸರ್ಕಾರ