ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಕಾಂಗ್ರೆಸ್‌ನಿಂದ ನಗರದಲ್ಲಿ ಶನಿವಾರ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಯಿತು.ಅಭಿಯಾನಕ್ಕೆ ಚಾಲನೆ ನೀಡಿದ ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಹೊರ ರಾಜ್ಯದ ಮತದಾರರು ಕರ್ನಾಟಕದ ಮತದಾರರ ಪಟ್ಟಿಯಲ್ಲಿದ್ದರೂ ಕಣ್ಮುಚ್ಚಿ ಕುಳಿತಿದೆ ಎಂದು ದೂರಿದರು.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಡಿಸಿದ ಪ್ರಶ್ನೆಗಳಿಗೆ ಉತ್ತರ ನೀಡುವುದನ್ನು ಬಿಟ್ಟು ಬಿಜೆಪಿಯ ಮುಖವಾಣಿಯಂತೆ ವರ್ತಿಸುತ್ತಿದೆ. ದೇಶದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗಗಳು ಶಾಮೀಲಾಗಿ ಮತ ಕಳ್ಳತನದಲ್ಲಿ ತೊಡಗಿವೆ. ಪ್ರಜಾಪ್ರಭುತ್ವ ಹಾಗೂ ಚುನಾವಣಾ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದರು.ಕೆಪಿಸಿಸಿ ಸೂಚನೆ ಮೇರೆಗೆ ಜಿಲ್ಲೆಯ ಕೆ.ಆರ್.ಪೇಟೆ, ನಾಗಮಂಗಲ, ಶ್ರೀರಂಗಪಟ್ಟಣ, ಮಳವಳ್ಳಿ, ಮದ್ದೂರು ಪಾಂಡವಪುರ, ಮಂಡ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಕೇಂದ್ರ ಸರ್ಕಾರದ ಮತಗಳ್ಳತನದ ವಿರುದ್ಧ ಸಹಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದರು.
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ ಎಂದರು.ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಮಾತನಾಡಿ, ಮತದಾನ ಬಹಳ ಪಾವಿತ್ರ್ಯವಾದದ್ದು. ಇದನ್ನು ಅರಿತುಕೊಳ್ಳಬೇಕು. ಮತಗಳ್ಳತನದ ಹೊಸ ಪಿಡುಗು ನಮ್ಮ ಮಧ್ಯ ಉದ್ಭವವಾಗಿರುವುದು ಆತಂಕಕಾರಿ ಸಂಗತಿ ಎಂದರು.
ಚುನಾವಣಾ ಆಯೋಗ ಹಾಗೂ ಸರ್ಕಾರಕ್ಕೆ ಕಾಂಗ್ರೆಸ್ ವರಿಷ್ಠರ ಆಣತಿ ಮೇರೆಗೆ ನ್ಯಾಯಯುತ ಕಾರ್ಯವನ್ನು ಒದಗಿಸಿಕೊಡಬೇಕು ಎಂದು ಸಹಿ ಸಂಗ್ರಹ ಅಭಿಯಾನ ಮಾಡುತ್ತಿದ್ದೇವೆ. ಸಾರ್ವಜನಿಕರು ಇದಕ್ಕೆ ಸಹಕರಿಸಿ ಹಕ್ಕನ್ನು ಉಳಿಸಿಕೊಳ್ಳುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದರು.ಅಭಿಯಾನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶುಭದಾಯಿನಿ, ಸಣ್ಣ ಕೈಗಾರಿಕೆ ಇಲಾಖೆ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಅಪ್ಪಾಜಿ, ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗ ಕಾಂಗ್ರೆಸ್ ಅಧ್ಯಕ್ಷ ಸಾತನೂರು ಕೃಷ್ಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ.ದ್ಯಾವಪ್ಪ, ಮುಡಾ ನಿರ್ದೇಶಕ ಅರುಣ್‌ಕುಮಾರ್, ಕಾಂಗ್ರೆಸ್ ಮುಖಂಡರಾದ ಚಂದಗಾಲು ವಿಜಯಕುಮಾರ್ ಅಭಿಲಾಷ್, ಚಿಕ್ಕಬಳ್ಳಿ ಕೃಷ್ಣ, ಹಳುವಾಡಿ ವೆಂಕಟೇಶ್, ಎನ್.ಸೋಮಶೇಖರ್, ರಾಜಣ್ಣ, ಉದಯ್, ಹನ್ಸಿಯ ಬಾನು, ಶಕುಂತಲಾ, ವೀಣಾ ಶಂಕರ್ ಸೇರಿದಂತೆ ಇತರರು ಭಾಗವಹಿಸಿದ್ದರು.