ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದು ಆರೋಪಿಸಿ ಬುಧವಾರ ಯುವ ಕಾಂಗ್ರೆಸ್ ವತಿಯಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ನಿವಾಸಕ್ಕೆ ಹಾಗೂ ಎನ್‌ಎಸ್‌ಯುಐ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿವಾಸಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕೆಲ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು.ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ "ನಮ್ಮ ತೆರಿಗೆ ನಮ್ಮ ಹಕ್ಕು " ದಿಲ್ಲಿ ಚಲೋ ಬೆಂಬಲಿಸಿ, ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಬಿಜೆಪಿ ಸರ್ಕಾರವು 2017ರಿಂದ ಈವರೆಗೆ ಕರ್ನಾಟಕ ರಾಜ್ಯಕ್ಕೆ ಜಿಎಸ್‌ಟಿಯ ಪರಿಹಾರದ ನಿಧಿಯಾದ ₹1.87 ಲಕ್ಷ ಕೋಟಿಯಷ್ಟು ಹಣವನ್ನು ನೀಡದೇ ಅನ್ಯಾಯ ಮಾಡಿದೆ. ಈ ವರ್ಷ ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಕಟ್ಟುವ ರಾಜ್ಯ ಎಂದರೆ ಅದು ಕರ್ನಾಟಕ. ಕರ್ನಾಟಕ ರಾಜ್ಯದಿಂದ ಗೆದ್ದು ಹೋದ ಬಿಜೆಪಿಯ 25 ಸಂಸದರು ಸಂಸತ್‌ನಲ್ಲಿ ತುಟಿ ಬಿಚ್ಚದೇ ರಾಜ್ಯಕ್ಕೆ ಬರಬೇಕಾದ ಪರಿಹಾರ ಹಾಗೂ ರೈತರ ಬರ ಪರಿಹಾರ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಹಲವಾರು ಯೋಜನೆಗಳ ಪಾಲನ್ನು ಕೇಳದೇ ಅಸಮರ್ಥರಾಗಿದ್ದಾರೆ. ಕೂಡಲೇ ರಾಷ್ಟ್ರಪತಿ ಅವರು ಮಧ್ಯ ಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆ ಬಳಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿನೋಬನಗರದ ಸಂಸದ ಬಿ.ವೈ ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದರೇ, ಎನ್‌ಎಸ್‌ಯುಐ ಕಾರ್ಯಕರ್ತರು ಬೈಪಾಸ್ ರಸ್ತೆಯ ಸಮೀಪವಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್, ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್.ಕುಮಾರೇಶ್ ,ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿ.ಎ.ರಮೇಶ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ, ನೂರುಲ್ಲಾ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂಧನ್, ಶಿವು ಸೂಡೂರು, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ,ಪ್ರಮುಖರಾದ ಎಚ್.ಪಾಲಾಕ್ಷಿ, ಎಂ. ರಾಹುಲ್ ಮತ್ತಿತರರು ಇದ್ದರು.- - - -7ಎಸ್‌ಎಂಜಿಕೆಪಿ04:
ಶಿವಮೊಗ್ಗದ ವಿನೋಬನಗರದ ಸಂಸದ ಬಿ.ವೈ ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.