ಗ್ಯಾರಂಟಿ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ

KannadaprabhaNewsNetwork | Published : Apr 23, 2024 12:45 AM

ಸಾರಾಂಶ

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಕಾವೇರಿ ನೀರು, ಜನಪರ ಕಾರ್ಯಕ್ರಮಗಳು ಸೇರಿದಂತೆ ಶಾಶ್ವತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಕುಮಾರಸ್ವಾಮಿ ಬೇಕಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಭವಿಷ್ಯದಲ್ಲಿ ಅನುಕೂಲವಾಗುವ ಯೋಜನೆ ರೂಪಿಸದೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಪರ ಮತಯಾಚನೆ ಮಾಡಿ ಮಾತನಾಡಿ, ಚುನಾವಣೆ ಮುಗಿದ ಮೇಲೆ ಎಲ್ಲಾ ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆ. ಜನರನ್ನು ಮರಳು ಮಾಡಲು ಮುಂದಿನ ದಿನಗಳಲ್ಲಿ ಕೇವಲ ಕೆಲವು ಮಂದಿಗೆ ಯೋಜನೆ ಲಾಭ ಬರಬಹುದು ಎಂದರು.

ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ ಟಿಎಸ್‌ಪಿ ಅನುದಾನದ 11 ಸಾವಿರ ಕೋಟಿ ರುಗಳನ್ನು ಬೇರೆಡೆಗೆ ವರ್ಗಾಹಿಸಿಕೊಂಡು ಖರ್ಚು ಮಾಡಿದೆ. ಕಾಂಗ್ರೆಸ್ 97 ವರ್ಷದಲ್ಲಿ ಸಂವಿಧಾನವನ್ನು 89 ಬಾರಿ ತಿದ್ದುಪಡಿ ಮಾಡಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ಶಾಶ್ವತವಾಗಿ ಉಳಿಸಲು ಪ್ರಧಾನಿ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಕೋರಿದರು.

ಕಾಂಗ್ರೆಸ್ ಪಕ್ಷ ನೆಹರು ಕುಟುಂಬದಲ್ಲಿ ನಿಧನರಾದವರಿಗೆ ನೂರಾರು ಎಕರೆ ಭೂಮಿ ಮೀಸಲಿಟ್ಟಿತು. ಆದರೆ, ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ನಿಧನರಾದಾಗ ಸ್ಥಳ ಕೊಡದೆ ದ್ರೋಹ ಮಾಡಿದೆ ಎಂದು ಕಿಡಿಕಾರಿದರು.

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಕಾವೇರಿ ನೀರು, ಜನಪರ ಕಾರ್ಯಕ್ರಮಗಳು ಸೇರಿದಂತೆ ಶಾಶ್ವತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಕುಮಾರಸ್ವಾಮಿ ಬೇಕಾಗಿದ್ದಾರೆ. ಅದಕ್ಕಾಗಿ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿ, ನನ್ನ ಅಧಿಕಾರದ ಅವಧಿಯಲ್ಲಿ ತಾಲೂಕನ್ನು ಸಾಕಷ್ಟು ಅಭಿವೃದ್ಧಿಪಡಿಸಿದ್ದೇನೆ. ಸ್ಥಳೀಯ ಹಿಂದುಳಿದವರಿಗೆ ಅಂದು ಪ್ರಧಾನಿ ಎಚ್‌.ಡಿ.ದೇವೇಗೌಡರು ನೀಡಿದ ಮೀಸಲಾತಿಯಿಂದಾಗಿ ಹಿಂದುಳಿದ ಸಮುದಾಯದ ಜನರು ಅಧಿಕಾರವನ್ನು ಪಡೆಯುವಂತಾಗಿದೆ ಎಂದರು.

ಎಚ್‌.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದರಿಂದ ಸಾವಿರಾರು ರೈತ ಕುಟುಂಬಗಳು ನೆಮ್ಮದಿಯಿಂದ ಬದುಕಿವೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಕಾವೇರಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಮತಗಳನ್ನು ಕೊಟ್ಟು ಜಯಶೀಲರನ್ನಾಗಿ ಮಾಡಬೇಕೆಂದು ಕೋರಿದರು.

ಈ ವೇಳೆ ಯುವ ಘಟಕ ಜಿಲ್ಲಾಧ್ಯಕ್ಷ ರವಿಕಂಸಾರ, ತಾಲೂಕು ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಮುಖಂಡರಾದ ಮುನಿರಾಜು, ಯಮದೂರು ಸಿದ್ದಾರಾಜು, ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣ ಸೇರಿದಂತೆ ಇತರರು ಇದ್ದರು.

Share this article