ಸಚಿವ ಸ್ಥಾನಕ್ಕಾಗಿ ದೆಹಲಿಗೆ ಗುಳೆ ಹೋಗುತ್ತಿರುವ ಕಾಂಗ್ರೆಸ್ ಶಾಸಕರು

KannadaprabhaNewsNetwork |  
Published : Jul 15, 2026, 03:00 AM IST
ಭುವನೇಶ್ವರಿ | Kannada Prabha

ಸಾರಾಂಶ

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಶಾಸಕರು ಸಾಮೂಹಿಕವಾಗಿ ಗುಳೆಹೋದಂತೆ ದೆಹಲಿಗೆ ತೆರಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ವಾಗ್ದಾಳಿ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಶಾಸಕರು ಸಾಮೂಹಿಕವಾಗಿ ಗುಳೆಹೋದಂತೆ ದೆಹಲಿಗೆ ತೆರಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳು ನಿರ್ಲಕ್ಷ್ಯಕ್ಕೊಳಗಾಗಿವೆ ಎಂದು ಆರೋಪಿಸಿದರು.2008ರಿಂದ ಬೆಳಗಾವಿ ನಗರಕ್ಕೆ ಪ್ರತಿವರ್ಷ ವಿಶೇಷ ಅಭಿವೃದ್ಧಿ ಅನುದಾನ ಬಿಡುಗಡೆಯಾಗುತ್ತಿತ್ತು. ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಮಾತ್ರವಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದಿನ ಸರ್ಕಾರವೂ ವಿಶೇಷ ಅನುದಾನ ನೀಡಿತ್ತು. ಆದರೆ, ಈಗಿನ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಕಳೆದರೂ ನಗರಕ್ಕೆ ಯಾವುದೇ ವಿಶೇಷ ಅನುದಾನ ನೀಡಿಲ್ಲ ಎಂದು ದೂರಿದರು.ಅನುದಾನದ ಕೊರತೆಯಿಂದ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಗುತ್ತಿಗೆದಾರರು ಕೆಲಸ ಆರಂಭಿಸುತ್ತಿಲ್ಲ. ಉಪಗುತ್ತಿಗೆದಾರರಿಗೂ ಕಾಮಗಾರಿ ಹಂಚಿಕೆಯಾಗಿಲ್ಲ. 3ನೇ ಕಂತಿನ ಅನುದಾನ ಬಿಡುಗಡೆಯಾಗದ ಕಾರಣ ಈಗಾಗಲೇ ಆರಂಭವಾಗಿದ್ದ ಸುಮಾರು 200ಕ್ಕೂ ಹೆಚ್ಚು ಮಂದಿರಗಳ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದರು.ರಾಜ್ಯದಲ್ಲಿ ವಸತಿ ಯೋಜನೆ, ರಸ್ತೆ ದುರಸ್ತಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆಯುಂಟಾಗಿದೆ. ಈ ಹಿಂದೆ ವಿಧಾನಮಂಡಲ ಅಧಿವೇಶನ ಹಾಗೂ ಗಣೇಶ ಉತ್ಸವ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ₹10 ರಿಂದ ₹15 ಕೋಟಿ ಅನುದಾನ ಲಭ್ಯವಾಗುತ್ತಿತ್ತು. ಆದರೆ, ಈಗ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವೇ ಇಲ್ಲದಂತಾಗಿದೆ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆಂಬ ಭಾವನೆ ಮೂಡುತ್ತಿದೆ ಎಂದು ವ್ಯಂಗ್ಯವಾಡಿದರು.ಮಳೆಗಾಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿದರೂ ಆಲಿಸುವಂತಹ ಸರ್ಕಾರ ಇದಲ್ಲ. ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಆಡಳಿತದಲ್ಲಿ ಸಮನ್ವಯವೇ ಇಲ್ಲ. ಸಚಿವರಾದವರು ಕೂಡ ತೃಪ್ತರಾಗಿಲ್ಲ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರು ಗುಳೆಹೋದಂತೆ ದೆಹಲಿಗೆ ತೆರಳುತ್ತಿದ್ದಾರೆ. ರಾಜ್ಯದಲ್ಲಿ ನೆರೆ, ಬರ ಸೇರಿದಂತೆ ಹಲವು ಸಮಸ್ಯೆಗಳಿದ್ದರೂ ಅವುಗಳ ಕಡೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.ನಗರದ ಅಭಿವೃದ್ಧಿಗೆ ಹಿಂದಿನ ಸರ್ಕಾರಗಳು ವಿಶೇಷ ಅನುದಾನ ನೀಡಿದ್ದವು. ಆದರೆ, ಈಗಿನ ಸರ್ಕಾರ 3 ವರ್ಷವಾದರೂ ಬೆಳಗಾವಿಗೆ ಯಾವುದೇ ವಿಶೇಷ ಪ್ಯಾಕೇಜ್ ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿರುವುದರಿಂದ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

-ಅಭಯ ಪಾಟೀಲ, ಶಾಸಕರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನೆರವಿಗೆ ಬಾರದೇ ಸಂಪುಟ ವಿಸ್ತರಣೆಯಲ್ಲಿ ಕಾಲಹರಣ: ನಿಖಿಲ್‌ ಕುಮಾರಸ್ವಾಮಿ
ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ