ರಾಹುಲ್ ವಿರುದ್ಧ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Sep 09, 2026, 02:15 AM IST
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾತನಾಡಿದರು.  | Kannada Prabha

ಸಾರಾಂಶ

ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದನ್ನು ಖಂಡಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಗದಗ

ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದನ್ನು ಖಂಡಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿ ಕೇಂದ್ರ ಸರ್ಕಾರ ಹಾಗೂ ಆರ್‌ಎಸ್‌ಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪರ ಧ್ವನಿ ಎತ್ತುವ ನಾಯಕರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ರಾಜಕೀಯ ದ್ವೇಷದ ಕ್ರಮವಾಗಿದೆ. ಸತ್ಯ ಮತ್ತು ಸಂವಿಧಾನದ ಪರವಾಗಿ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.

ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆ ಅತ್ಯಂತ ಖಂಡನೀಯ. ಇದು ದೇಶದ ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಮನಸ್ಥಿತಿಯನ್ನು ತೋರಿಸುತ್ತದೆ. ಇಂತಹ ಕೃತ್ಯಗಳಿಂದ ಕಾಂಗ್ರೆಸ್‌ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವ ಮುಖಂಡ ಅಕ್ಷಯ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ವಾಸಪ್ಪ ಕುರುಡಗಿ, ಬಸವರಾಜ ಕಡೇಮನಿ ಸೇರಿದಂತೆ ಹಲವು ಮುಖಂಡರು ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳು ಹಾಗೂ ಆರ್‌ ಎಸ್‌ ಎಸ್‌ ನ ಕಾರ್ಯವೈಖರಿ ಟೀಕಿಸಿದರು. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಆಶಯಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ನಾಯಕಿ ಸುಜಾತಾ ದೊಡ್ಡಮನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ಅಶೋಕ ಮಂದಾಲಿ, ಪ್ರಭು ಬುರಬುರೆ, ನೀಲಮ್ಮ ಬೊಳನವರ, ಉಮರ್ ಫಾರೂಕ್ ಹುಬ್ಬಳ್ಳಿ, ಮಹ್ಮದ ಶಾಲಗಾರ, ಬಸವರಾಜ ಸುಂಕಾಪೂರ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಸತಿ ಶಾಲೆಯಲ್ಲಿ ಆರೋಗ್ಯ ಇಲಾಖೆ ತಂಡದಿಂದ ವಿದ್ಯಾರ್ಥಿಗಳ ತಪಾಸಣೆ
ಹಲವು ಸವಾಲುಗಳನ್ನೆದುರಿಸಿ ಶಿಕ್ಷಕರು ವೃತ್ತಿ ಗೌರವ ಕಾಪಾಡಿಕೊಳ್ಳಬೇಕಾಗಿದೆ