ಕನ್ನಡಪ್ರಭ ವಾರ್ತೆ ಹಾಸನ
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಚುನಾವಣಾ ಆಯೋಗದ ಕಾರ್ಯವೈಖರಿ ಖಂಡಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವಂತಾಗಬಾರದು ಎಂದು ಒತ್ತಾಯಿಸಿದರು. ಪ್ರತಿಭಟನಾಕಾರರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬಿ. ಎಂ. ರಸ್ತೆಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ನಂತರ ಎನ್. ಆರ್. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಈ ಸಂದರ್ಭದಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಪ್ರಭುತ್ವದ ಚುನಾವಣಾ ಪ್ರಕ್ರಿಯೆಯ ಪ್ರಮುಖ ಭಾಗವಾಗಿದ್ದು, ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಕೈಬಿಡುವಂತಾಗಬಾರದು ಎಂದು ಆಗ್ರಹಿಸಿದರು. ವಿಶೇಷವಾಗಿ ಬಡವರು, ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು ಹಾಗೂ ಸಾಮಾನ್ಯ ಮತದಾರರಿಗೆ ದಾಖಲೆಗಳ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ತೊಂದರೆಯಾಗದಂತೆ ಚುನಾವಣಾ ಪ್ರಾಧಿಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳ ಪರಿಶೀಲನೆ ಮತ್ತು ಪರಿಷ್ಕರಣೆ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಬೇಕು. ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿದ್ದರೆ ಅವರಿಗೆ ಸೂಕ್ತ ಅವಕಾಶ ಕಲ್ಪಿಸಿ, ಆಕ್ಷೇಪಣೆ ಹಾಗೂ ಮೇಲ್ಮನವಿ ಸಲ್ಲಿಸಲು ಅಗತ್ಯ ಕಾಲಾವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು, ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.