ಕೇಂದ್ರ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Sep 29, 2026, 02:15 AM IST
ಹಾವೇರಿ ಜಿಲ್ಲಾಡಳಿತ ಭವನದ ಎದುರು ಪ್ರಧಾನಿ ಮೋದಿ, ಅಮಿತ್ ಶಾ, ಚುನಾವಣಾ ಆಯುಕ್ತಜ್ಞಾನೇಶಕುಮಾರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. | Kannada Prabha

ಸಾರಾಂಶ

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ಪದಚ್ಯುತಿಗೊಳಿಸಿ, ಬಂಧನಕ್ಕೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಡಳಿತ ಭವನದ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹಾವೇರಿ:ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ಪದಚ್ಯುತಿಗೊಳಿಸಿ, ಬಂಧನಕ್ಕೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಡಳಿತ ಭವನದ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಎಸ್‌ಐಆರ್ ನೆಪದಲ್ಲಿ ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರದ ಚುಕ್ಕಾಣಿ ಹಿಡಿಯಲು ಹುನ್ನಾರ ನಡೆಸಿದ್ದಾರೆ. ಇದಕ್ಕೆ ಪಕ್ಷದ ಕಾರ್ಯಕರ್ತರು ಆಸ್ಪದ ನೀಡಬಾರದು. ಮುಂಬರುವ ಎಲ್ಲಾ ಹಂತದ ಚುನಾವಣೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ. ನಮ್ಮ ಕ್ಷೇತ್ರದಲ್ಲಿ ಒಬ್ಬ ಅರ್ಹ ಮತದಾರನ ಮತವೂ ಪಟ್ಟಿಯಿಂದ ಹೊರಗುಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮತಗಳು ಬಿಟ್ಟು ಹೋಗದಂತೆ ಕಾರ್ಯಕರ್ತರು ಗಮನಹರಿಸಬೇಕು. ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಗೃಹಮಂಡಳಿ ಅಧ್ಯಕ್ಷ, ಶಾಸಕ ಶ್ರೀನಿವಾಸ್ ಮಾನೆ ಮಾತನಾಡಿ, ಎಸ್‌ಐಆರ್‌ನಲ್ಲಿ ಮತಗಳನ್ನು ರದ್ದುಪಡಿಸಿರುವುದು ಗಮನಕ್ಕೆ ಬಂದ ಬಳಿಕ ರಾಹುಲ್ ಗಾಂಧಿ ಸಾಕ್ಷ್ಯಾಧಾರಗಳೊಂದಿಗೆ ಮಾಹಿತಿ ಪಡೆದು ಜನಜಾಗೃತಿ ಮೂಡಿಸುತ್ತಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಮಹಾರಾಷ್ಟ್ರ ಸೇರಿದಂತೆ ವಿವಿಧ ಚುನಾವಣೆಗಳ ಫಲಿತಾಂಶಗಳ ಕುರಿತು ಅನುಮಾನಗಳು ಮೂಡುವಂತಾಗಿದೆ ಎಂದು ಆರೋಪಿಸಿದ ಅವರು, ಚುನಾವಣಾ ಆಯೋಗದ ಮೇಲಿನ ವಿಶ್ವಾಸ ಉಳಿಸಲು ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಸಕ ಯಾಸೀರ್‌ಖಾನ್ ಪಠಾಣ್ ಮಾತನಾಡಿ, ಧರ್ಮಗಳ ನಡುವೆ ಕಂದಕ ಸೃಷ್ಟಿಸುವುದು, ಶಾಸಕರು ಹಾಗೂ ಸಂಸದರನ್ನು ಖರೀದಿಸಿ ರಾಜಕಾರಣ ಮಾಡುವ ಕುತಂತ್ರದ ಬುದ್ದಿ ಬಿಜೆಪಿಯವರಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಪ್ರಯತ್ನ ನಡೆದಿದೆ. ರೈತರು ಹಾಗೂ ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಲು ಜನರು ಎಚ್ಚೆತ್ತುಕೊಳ್ಳಬೇಕು. ಇದೊಂದು ಎರಡನೇ ಸ್ವಾತಂತ್ರ್ಯ ಸಂಗ್ರಾಮದಂತಾಗಿದೆ ಎಂದರು.

ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಮಾತನಾಡಿ, ಚುನಾವಣಾ ಪದ್ಧತಿಯನ್ನು ಬುಡಮೇಲು ಮಾಡುವ ಕೆಲಸ ಬಿಜೆಪಿಯಿಂದ ನಡೆಯುತ್ತಿದೆ. ಮತದಾರರ ಪಟ್ಟಿಯಲ್ಲಿ ಯಾವುದೇ ನ್ಯೂನತೆ ಉಂಟಾಗದಂತೆ ಪಕ್ಷದ ಬಿಎಲ್‌ಒ-2ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅರ್ಹ ಮತದಾರರು ಯಾರೂ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಮುಖಂಡ ಆನಂದಸ್ವಾಮಿ ಗಡ್ಡದ್ದೇವರಮಠ ಮಾತನಾಡಿದರು. ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮರಗಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಸಂತಾ ಬಾಗೂರ, ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ಮುಖಂಡರಾದ ಎಂ.ಎಂ. ಹಿರೇಮಠ, ಕೊಟ್ರೇಶಪ್ಪ ಬಸೇಗಣ್ಣಿ, ಪ್ರೇಮಾ ಪಾಟೀಲ, ಎಂ.ಎಂ. ಮೈದೂರ, ಈರಪ್ಪ ಲಮಾಣಿ, ಪ್ರಕಾಶ ಬನ್ನಿಹಟ್ಟಿ, ಶಂಕರ ಮೆಹರವಾಡೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಜನರಿಗೆ ನಂಬಿಕೆ ಉಳಿಯಬೇಕಾದರೆ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕಿಗೆ ಧಕ್ಕೆ ಉಂಟಾಗದಂತೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣಾ ವ್ಯವಸ್ಥೆಯ ಮೇಲಿನ ಅನುಮಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟ ಉತ್ತರ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಮತದಾನದ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದೆ. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಪ್ರಶ್ನೆಗಳಿದ್ದು, ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು. ಪ್ರತಿ ಬೂತ್‌ನಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಹೇಳಿದರು.

ಪ್ರತಿಕೃತಿ ದಹಿಸಿ ಆಕ್ರೋಶ: ಪ್ರತಿಭಟನಾಕಾರರು ಜ್ಞಾನೇಶಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಳಿಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹನಕ್ಕೆ ಕಾರ್ಯಕರ್ತರು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಆದರೂ ಪಟ್ಟು ಸಡಿಲಿಸದ ಕಾರ್ಯಕರ್ತರು ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬದಲಾದ ಜೀವನಶೈಲಿ ಅನಾರೋಗ್ಯಕ್ಕೆ ಕಾರಣ: ಡಾ. ಹಿರೇಮಠ
ರಾಷ್ಟ್ರೀಯ ಏಕತೆ ಬೆಸೆಯುವ ಭಾಷೆ ಹಿಂದಿ: ಡಾ. ಹುಸೇನಸಾಬ