ಜ್ಞಾನೇಶ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Oct 04, 2026, 02:15 AM IST
ಪ್ರತಿಭಟನೆಯ ವೇಳೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ನಾಯಕರು ಪಾಲ್ಗೊಂಡಿರುವುದು. | Kannada Prabha

ಸಾರಾಂಶ

ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಡವರ ಮತದಾನ ಹಕ್ಕು ಕಸಿಯಲಾಗುತ್ತಿದೆ: ಗದಗ ಶಾಸಕ ಎಚ್.ಕೆ. ಪಾಟೀಲ

ಕನ್ನಡಪ್ರಭ ವಾರ್ತೆ ಗದಗ

ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಶಾಸಕ, ಮಾಜಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ದೇಶದ ಬಡವರು, ನಿರ್ಗತಿಕರು ಹಾಗೂ ಸಾಮಾನ್ಯ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸಿದೆ. ಇಂತಹ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ ಮನೆಗೆ ಕಳುಹಿಸುವ ಕಾಲ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮತದಾನದ ಹಕ್ಕು ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಹಕ್ಕು. ಅದನ್ನು ಕಿತ್ತುಕೊಳ್ಳುವ ಯಾವುದೇ ಪ್ರಯತ್ನ ನಡೆದರೂ ಕಾಂಗ್ರೆಸ್ ಸಹಿಸಿಕೊಳ್ಳುವುದಿಲ್ಲ. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ತೆಗೆದು ಹಾಕಲಾಗುತ್ತಿದೆ. ಹಾಗಾಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವುದು ಕಾಂಗ್ರೆಸ್ ಕಾರ್ಯಕರ್ತರ ಜವಾಬ್ದಾರಿಯಾಗಿದೆ.

ಈಗಾಗಲೇ ಪಶ್ಚಿಮ ಬಂಗಾಳ, ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳಾಗಿವೆ. ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತದಾರರ ಪೈಕಿ ಸುಮಾರು 10 ಲಕ್ಷ ಜನರಿಗೆ ಮಾತ್ರ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗಿದೆ. ಈ ಮೂಲಕ ಕೇಂದ್ರ ಚುನಾವಣಾ ಆಯೋಗದ ಜ್ಞಾನೇಶ್ ಕುಮಾರ್ ಅವರು ಬಿಜೆಪಿಗೆ ಸಹಾಯ ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

ಗದಗ ಜಿಲ್ಲೆಯಲ್ಲೂ ಸುಮಾರು 12,500 ಮತಗಳನ್ನು ತೆಗೆದುಹಾಕಲು ಸಿದ್ಧತೆ ನಡೆಸಲಾಗಿದೆ. ಆದರೆ ಕಾರ್ಯಕರ್ತರ ಜಾಗೃತಿಯಿಂದ ಅಧಿಕಾರಿಗಳಿಗೆ ನೋಟಿಸ್ ನೀಡುವ ಧೈರ್ಯ ಆಗಿಲ್ಲ. ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತೇನೆ. ಯಾರದ್ದೇ ಮತದಾನದ ಹಕ್ಕು ಕಸಿದುಕೊಳ್ಳುವ ಪ್ರಯತ್ನ ನಡೆದಿರುವುದು ಗಮನಕ್ಕೆ ಬಂದರೆ ಕಾಂಗ್ರೆಸ್ ಪಕ್ಷ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.

ಕೇಂದ್ರ ಚುನಾವಣಾ ಆಯೋಗ ಜನರ ವಿಶ್ವಾಸ ಕಳೆದುಕೊಂಡಿದೆ. ಜೆನ್ ಜಿ ಸೇರಿದಂತೆ ದೇಶದ ಯುವಜನತೆ ಎಚ್ಚೆತ್ತುಕೊಂಡಿದ್ದಾರೆ. ಯುವಜನರ ಜಾಗೃತಿಯಿಂದ ಕೇಂದ್ರ ಸರಕಾರಕ್ಕೂ ನಡುಕ ಉಂಟಾಗಿದೆ. ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಕಾಲ ಸನ್ನಿಹಿತವಾಗಿದೆ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಯೋಜನಾ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ವಾಸಣ್ಣ ಕುರುಡಗಿ, ಐ.ಎಸ್. ಪಾಟೀಲ, ಗುರಣ್ಣ ಬಳಗಾನೂರ, ವಿ.ಎಲ್. ನಾಡಗೌಡ, ಅಕ್ಬರಸಾಬ ಬಬರ್ಚಿ, ಪ್ರಭು ಬುರಬುರೆ, ಹೇಮಂತಗೌಡ ಪಾಟೀಲ, ಡಿ.ಡಿ. ಮೋರನಾಳ, ಬಸವರಾಜ ಕಡೇಮನಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಕೃಷ್ಣಗೌಡ ಪಾಟೀಲ, ಪರಶುರಾಮ ಅಳಗವಾಡಿ, ವಿದ್ಯಾಧರ ದೊಡ್ಡಮನಿ, ಪ್ರವೀಣ ಯಾವಗಲ್, ಎಲ್.ಡಿ. ಚಂದಾವರಿ, ಬರಕತಾಲಿ ಮುಲ್ಲಾ, ಎಂ.ಸಿ. ಶೇಕ್, ಸೂರಜ್ ಕಟ್ಟಿಮನಿ, ಚಂದ್ರು ಕರಿಸೋಮನಗೌಡ್ರ, ಎಸ್.ಡಿ. ಮಕಾನದಾರ, ಸುರೇಶ ಕಟ್ಟಿಮನಿ, ಹುಮಾಯೂನ್ ಮಾಗಡಿ, ಬಸವರಾಜ ಸುಂಕಾಪುರ, ನೀಲಮ್ಮ ಬೋಳನವರ, ಶಕುಂತಲಾ ಅಕ್ಕಿ, ಹನುಮಂತ ವೀರಾಪುರ ಇತರರಿದ್ದರು.ಸಂಚಾರ ಅಸ್ತವ್ಯಸ್ತ:

ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಅಧಿಕಾರಿಯನ್ನು ದುರುಪಯೋಗ ಮಾಡಿಕೊಂಡ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯಿಂದಾಗಿ ಗಾಂಧಿ ವೃತ್ತದ ಮೂಲಕ ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗಗಳು ಬಂದ್ ಆದ ಹಿನ್ನೆಲೆ 2 ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ: ಡಿಸಿ ಶ್ರೀಧರ್
ಪಂಚಪೀಠಗಳು ಜ್ಞಾನ, ಸಂಸ್ಕಾರ ನೀಡುವ ಕೇಂದ್ರ; ರಂಭಾಪುರಿ ಶ್ರೀ