ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಶಾ ಹೇಳಿಕೆ ಖಂಡಿಸಿ ರಾಜ್ಯದ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Dec 24, 2024, 12:50 AM ISTUpdated : Dec 24, 2024, 11:40 AM IST
14 | Kannada Prabha

ಸಾರಾಂಶ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಸೋಮವಾರ ಕಾಂಗ್ರೆಸ್‌ ಹಾಗೂ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

  ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಸೋಮವಾರ ಕಾಂಗ್ರೆಸ್‌ ಹಾಗೂ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಮಧ್ಯೆ, ಅಮಿತ್‌ ಶಾ ಹೇಳಿಕೆ ಖಂಡಿಸಿ ಮಂಗಳವಾರ ಗದಗ ಹಾಗೂ ಕಲಬುರಗಿ ಬಂದ್‌ ಗೆ ಕರೆ ನೀಡಲಾಗಿದೆ.

ಮೈಸೂರಿನ ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯವರೆಗೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್‌ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಶಾಸಕರಾದ ಕೆ. ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಇತರ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಮಿತ್ ಶಾ ಭಾವಚಿತ್ರಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಷ್ಟ್ರಪತಿಯವರು ಕೂಡಲೇ ಗೃಹ ಸಚಿವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಬಳಿಕ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಹೊಳೆನರಸೀಪುರದಲ್ಲಿ ವಿವಿಧ ದಲಿತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಅಮಿತ್ ಶಾ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ, ದಸಂಸ, ಜನಶಕ್ತಿ, ಮಹಿಳಾ ಮುನ್ನಡೆ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ, ಶಿವಮೊಗ್ಗ, ಬಾಗಲಕೋಟೆ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.

ಈ ಮಧ್ಯೆ, ಮಂಗಳವಾರ ಗದಗ ಹಾಗೂ ಕಲಬುರಗಿ ಬಂದ್‌ ಗೆ ಕರೆ ನೀಡಲಾಗಿದೆ. ಕಲಬುರಗಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಲಬುರಗಿ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ