ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ,
ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ತ್ವ ಸಿದ್ದಾಂತದ ಬಗ್ಗೆ ಚಿಂತನೆ ಮಾಡುತ್ತಿದೆ. ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಪ್ರತಿನಿತ್ಯ ಆಚರಣೆಯಾಗಬೇಕು. ಅವರ ಆದರ್ಶ ಮೌಲ್ಯಗಳನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸುವ ಕೆಲಸನ್ನು ಮಾಡಬೇಕಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸೋಮವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಸಾಮಾನ್ಯ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಸಂವಿಧಾನದಡಿ ಕೆಲಸ ಮಾಡುತ್ತಿದ್ದು, ಜಾತ್ಯಾತೀತ ಪರಿಕಲ್ಪನೆಯನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಮಾತನಾಡಿ, ಅಂಬೇಡ್ಕರ್ ರಚಿಸಿರುವ ಸಂವಿಧಾನ ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಮಾದರಿ. ಸರ್ವರಿಗೂ ಸಮಬಾಳು, ಸಮಪಾಲು ಎಂಬಂತೆ ಭಾರತದ ಸಂವಿಧಾನಕ್ಕೆ ಮಹತ್ತರ ಗೌರವವಿದೆ ಎಂದು ಹೇಳಿದರು.ಭಾರತದ ಪ್ರತಿಯೊಬ್ಬ ಪ್ರಜೆಗೂ ಅಂಬೇಡ್ಕರ್ ಆಸ್ತಿಯಾಗಿದ್ದಾರೆ. ಸಮ ಸಮಾಜ ನಿರ್ಮಾಣ ಮಾಡಬೇಕು ಎಂಬುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ನಿಟ್ಟಿನಲ್ಲಿ ನಾವೆಲ್ಲರೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಅಂಬೇಡ್ಕರ್ ಸಂವಿಧಾನ ರಚನೆ ಮಾಡದೇ ಇರದಿದ್ದರೆ ದೇಶದಲ್ಲಿ ಸಾಮಾನ್ಯ ಜನರು ಬದುಕಲು ಆಗುತ್ತಿರಲಿಲ್ಲ. ಮಾನವ ಧರ್ಮ ಗೌರವಿಸುವ ಸ್ಥಿತಿ ಇಂದು ನಿರ್ಮಾಣ ವಾಗಲು ಮೂಲ ಕಾರಣ ಅಂಬೇಡ್ಕರ್ ಎಂದು ಹೇಳಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಅಂಬೇಡ್ಕರ್ ಅವರ ಆದರ್ಶ ಮೌಲ್ಯ ಎಲ್ಲರಿಗೂ ದಾರಿದೀಪ. ದೇಶದ ಮೂಲೆ ಮೂಲೆಯಲ್ಲೂ ಇಂದು ಅಂಬೇಡ್ಕರ್ ಜಯಂತಿಯನ್ನು ಗೌರವ ಪೂರ್ವಕವಾಗಿ ಆಚರಣೆ ಮಾಡ ಲಾಗುತ್ತಿದೆ ಎಂದು ತಿಳಿಸಿದರು.ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾಗಿಲ್ಲ. ಅವರನ್ನು ಪ್ರತಿದಿನ ನೆನಪು ಮಾಡಿಕೊಳ್ಳುವಂತಾಗಬೇಕು. ದೇಶದಲ್ಲಿ ಅಸ್ಪೃಶ್ಯತೆ ತೊಡೆದು ಹಾಕಲು ಶ್ರಮಿಸಿದ ಮಹಾನ್ ನಾಯಕರಾಗಿದ್ದಾರೆ ಎಂದರು.ಇಂದು ದೇಶದ ಎಲ್ಲಾ ಹಳ್ಳಿಗಳಲ್ಲೂ ಅವರ ವಿಚಾರಧಾರೆಗಳನ್ನು ಅನುಸರಿಸುತ್ತಿದ್ದಾರೆ. ಅಂಬೇಡ್ಕರ್ ನಮಗೆ ಕೊಟ್ಟಿರು ವಂತ ಸಂವಿಧಾನದಿಂದ ಮಾತ್ರ ದೇಶದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡಲು ಪ್ರೇರಣೆಯಾಗಿದೆ ಎಂದು ಹೇಳಿದರು.ರಾಜ್ಯ ಕೆಪೆಕ್ಸ್ ಅಧ್ಯಕ್ಷ ಬಿ.ಎಚ್.ಹರೀಶ್, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಪ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ನಾಯ್ಡು, ಕಾರ್ಯದರ್ಶಿ ಈಶ್ವರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ರಾಜಕುಮಾರ್, ಧರ್ಮೇಶ್, ರಾಜ್ಯ ಎಸ್.ಸಿ. ಘಟಕ ರಾಜ್ಯ ಸಂಚಾಲಕಿ ನೇತ್ರಾವತಿ, ಆಶ್ರಯ ಸಮಿತಿ ಸದಸ್ಯೆ ಯಶೋಧ, ಜಿಲ್ಲಾ ಮಹಿಳಾ ಘಟಕ ಉಪಾಧ್ಯಕ್ಷೆ ಹೇಮಾವತಿ ಉಪಸ್ಥಿತರಿದ್ದರು.
14 ಕೆಸಿಕೆಎಂ 4ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸೋಮವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮುಖಂಡರು ಪುಷ್ಪಾರ್ಚನೆ ಸಲ್ಲಿಸಿದರು.