ಕಾರವಾರ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜೀವಂತವಾಗಿರಿಸಲು ಅಭಿವೃದ್ಧಿಯನ್ನು ಮರೀಚಿಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರೂಪಾಲಿ ಎಸ್. ನಾಯ್ಕ ಆರೋಪಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದ ಕೀರ್ತಿಯೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದರು.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿಯ ಹತ್ಯೆಯು ಸಮಾಜದಲ್ಲಿ ಭಯ ಹುಟ್ಟಿಸಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲದ ವಾತಾವರಣ ಸೃಷ್ಟಿಯಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಸರ್ಕಾರವನ್ನು ತೊಲಗಿಸಬೇಕು. ಅದಕ್ಕಾಗಿ ಮೂರನೆ ಬಾರಿಗೆ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದರು.ದೇಶದ ಅಭಿವೃದ್ಧಿಗೆ ನಮ್ಮೆಲ್ಲರ ರಕ್ಷಣೆಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು. ನರೇಂದ್ರ ಮೋದಿ ಅವರು ನಮಗಾಗಿ ಹಗಲಿರುಳು ಶ್ರಮಿಸುತ್ತಿದ್ದು, ಅವರಿಗೆ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಕೊಡುಗೆಯನ್ನು ನೀಡಬೇಕು.
ದೇಶದ ಎಲ್ಲ ನಾಗರಿಕರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಅದಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡೋಣ. ಅದಕ್ಕಾಗಿ ಮೇ 7ರಂದು ಕಮಲದ ಗುರುತಿಗೆ ಮತ ನೀಡಿ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ ಗುನಗಿ, ನಗರ ಮಂಡಲದ ನಾಗೇಶ ಕುರ್ಡೇಕರ, ಅಂಕೋಲಾ ಮಂಡಲದ ಗೋಪಾಲಕೃಷ್ಣ ವೈದ್ಯ, ಜಿಲ್ಲಾ ಪ್ರಮುಖರಾದ ನಾಗರಾಜ ನಾಯಕ, ಪ್ರಧಾನ ಕಾರ್ಯದರ್ಶಿಗಳಾದ ಸೂರಜ ದೇಸಾಯಿ, ಉದಯ ನಾಯ್ಕ, ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ, ಬೂತ್ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.