ಬಳ್ಳಾರಿ; ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆ ಖಂಡಿಸಿ ಇಲ್ಲಿನ ಮಹಿಳಾ ಕಾಂಗ್ರೆಸ್ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಡಳಿತ ಮೂಲಕ ಚುನಾವಣೆ ಆಯೋಗಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ಕಟ್ಟಿಕೊಂಡಿದ್ದಾರೆ. ಆರ್ಥಿಕ ಪ್ರಗತಿ ಕಂಡುಕೊಳ್ಳುತ್ತಿದ್ದಾರೆ. ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರು ಗ್ಯಾರಂಟಿ ಯೋಜನೆಗಳು ಹೆಚ್ಚು ಸಹಕಾರಿಯಾಗಿವೆ. ಆದರೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಹಿಳೆಯರ ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಕುಮಾರಸ್ವಾಮಿ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ. ಮಹಿಳಾ ವಿರೋಧಿ ನೀತಿಯ ಹೇಳಿಕೆಗಳನ್ನು ನೀಡುತ್ತಿವೆ. ಇದು ಅತ್ಯಂತ ಖಂಡನೀಯ. ಬಡಜನರ ಕಲ್ಯಾಣ ಸಹಿಸಲಾಗದ ಮಾಜಿ ಸಿಎಂ ಕುಮಾರಸ್ವಾಮಿ ಅಸಹನೀಯ ಹೇಳಿಕೆಗಳನ್ನು ನೀಡಿ, ಮಹಿಳಾ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ದೂರಿದರು.ನಗರದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಮೂಲಕ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಮನವಿ ಸ್ವೀಕರಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಎಂ.ಎಸ್. ಮಂಜುಳಾ, ಪ್ರಧಾನ ಕಾರ್ಯದರ್ಶಿ ಟಿ.ಪದ್ಮಾ, ಮೇಯರ್ ಶ್ವೇತಾ, ಮಾಜಿ ಮೇಯರ್ ರಾಜೇಶ್ವರಿ, ಮಹಿಳಾ ಮುಖಂಡರಾದ ಶೋಭಾ ಕಾಳಿಂಗ, ಚಂಪಾ ಚೌಹಾಣ್, ಶಮೀಮ್ ಜಕ್ಲಿ, ಲಿಡ್ಕರ್ ಮಂಡಳಿ ಅಧ್ಯಕ್ಷ ಮುಂಡ್ರಗಿ ನಾಗರಾಜ್, ಮುಖಂಡರಾದ ಬೋಯಪೋಟಿ ವಿಷ್ಣು, ಅಭಿಲಾಷ್, ನಾಗರಾಜಗೌಡ, ಅಲುವೇಲು ಸುರೇಶ್ ಸೇರಿದಂತೆ ಪಕ್ಷದ ಮಹಿಳಾ ಘಟಕ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.