ಅರಣ್ಯ, ವನ್ಯಜೀವಿಗಳ ಸಂರಕ್ಷಣೆ ಎಲ್ಲರ ಹೊಣೆ: ವರ್ಣಿತ್‌ ನೇಗಿ

KannadaprabhaNewsNetwork |  
Published : Oct 08, 2023, 12:00 AM IST
ಚಿತ್ರ : 7ಎಂಡಿಕೆ2 :  69 ನೇ ವನ್ಯಜೀವಿ ಸಪ್ತಾಹದಲ್ಲಿ ಪಾಲ್ಗೊಂಡಿದ್ದವರು.  | Kannada Prabha

ಸಾರಾಂಶ

ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ವನ್ಯಜೀವಿಗಳ ಸಂರಕ್ಷಣೆಗಾಗಿ ಪಾಲುಗಾರಿಕೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ಸಮಾರೋಪ.

ಕನ್ನಡಪ್ರಭ ವಾರ್ತೆ ಮಡಿಕೇರಿ ಪರಿಸರ ಸಮತೋಲನ ಕಾಪಾಡಲು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಹಳ ಅಗತ್ಯವಾಗಿದ್ದು, ಜೀವ ಸಂಕುಲ ವ್ಯವಸ್ಥೆಯಲ್ಲಿ ವನ್ಯಜೀವಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶನಿವಾರ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕಾಲೇಜಿನ ಎನ್.ಸಿ.ಸಿ. ಘಟಕ ಸಂಯುಕ್ತಾಶ್ರಯದಲ್ಲಿ ‘ವನ್ಯಜೀವಿಗಳ ಸಂರಕ್ಷಣೆಗಾಗಿ ಪಾಲುಗಾರಿಕೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ: 2023ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊಂದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ವನ್ಯಜೀವಿಗಳು ಮತ್ತು ಮಾನವನ ನಡುವೆ ಉಂಟಾಗುತ್ತಿರುವ ಸಂಘರ್ಷವನ್ನು ತಡೆಯುವ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು. ವನ್ಯಜೀವಿ ಸಪ್ತಾಹದ ಉದ್ದೇಶ ಹಾಗೂ ‘ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಸಮುದಾಯದ ಸಹಭಾಗಿತ್ವ’ ಕುರಿತು ಮಾಹಿತಿ ನೀಡಿ ಮಾತನಾಡಿದ ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಶಿವರಾಮ್ ಬಾಬು, ಪರಿಸರದಲ್ಲಿ ಜೇನುನೊಣಗಳ ಪಾತ್ರ ಅತಿ ಮುಖ್ಯವಾಗಿದ್ದು, ಇವುಗಳು ಆಹಾರ ಸರಪಳಿ ಮತ್ತು ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿವೆ. ಜೇನು ನೊಣವಾಗಲಿ, ಯಾವುದೇ ಜೀವ ಸಂಕುಲವಿಲ್ಲದೇ ನಮ್ಮ ಪರಿಸರ ವ್ಯವಸ್ಥೆಯನ್ನು ಊಹಿಸಲು ಕಷ್ಟಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಪರಿಸರದಲ್ಲಿ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಅರಣ್ಯಕ್ಕೆ ನಾವು ಯಾವುದೇ ಹಾನಿಯನ್ನು ಉಂಟುಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆಯವರು ಹೆಚ್ಚಿನ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾದುದು. ನಾವೆಲ್ಲರೂ ಅವರೊಂದಿಗೆ ಕೈಜೋಡಿಸಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಸಹಕರಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು. ವನ್ಯಜೀವಿಗಳ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ ಬಿ.ರಾಘವ, ಅರಣ್ಯ ಮತ್ತು ಜೀವಿ ಸಂಕುಲದ ಉಳಿವು ನಮ್ಮೆಲ್ಲರ ಉಳಿವು. ಹಾಗಾಗಿ ನಾವೆಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಬದ್ಧರಾಗಬೇಕು ಎಂದರು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಅಮೂಲ್ಯ ಸಸ್ಯ ಮತ್ತು ಪ್ರಾಣಿ ಸಂಪತ್ತು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ ಎಂದರು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಜಿಲ್ಲೆಯ ಶಾಲಾ- ಕಾಲೇಜುಗಳಲ್ಲಿ ಇಕೋ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್.ಘಟಕಗಳ ವಿದ್ಯಾರ್ಥಿಗಳ ಮೂಲಕ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ (ಎಸಿಎಫ್) ಶ್ರೀನಿವಾಸ್ ನಾಯಕ್, ಎ.ಎ.ಗೋಪಾಲ್, ಪುಷ್ಪಗಿರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಜೆ.ಅನನ್ಯಕುಮಾರ್, ತಲಕಾವೇರಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಕೆ.ಕೊಟ್ರೇಶ್, ಆರ್‌ಎಫ್‌ಒ ಕೆ.ಎಂ. ಮರಿಸ್ವಾಮಿ, ಕಚೇರಿಯ ಮೇಲ್ವಿಚಾರಕಿ ಜೆ.ಸಿ. ಕಾಂತಮತಿ, ಡಿಆರ್‌ಎಫ್‌ಒಗಳಾದ ಡಿಆರ್‌ಎಫ್‌ಒ ಅನಿಲ್ ಡಿಸೋಜ, ಎಂ.ಗಣೇಶ್, ಎನ್.ಎಲ್.ಚೇತನ್, ಆನಂದ್, ಶ್ರೀಧರ್, ಸಿಬ್ಬಂದಿ ಯೋಗೇಶ್, ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಶಿಕ್ಷಕಿ ಎಸ್.ಡಿ.ಅನಿತಾ ಕಾರ್ಯಕ್ರಮ ನಿರೂಪಿಸಿದರು. ನಗರದ ಎಫ್‌ಎಂಸಿ ಕಾಲೇಜಿನ ಎನ್.ಸಿ.ಸಿ.ಕೆಡೆಟ್‌ಗಳು, ವಿದ್ಯಾರ್ಥಿಗಳು, ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. * ಸನ್ಮಾನ, ಬಹುಮಾನ ವಿತರಣೆ ವನ್ಯಜೀವಿ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ಎಂಟು ಮಂದಿ ಅರಣ್ಯ ವೀಕ್ಷಕರನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಲಾಯಿತು. ವನ್ಯಜೀವಿ ಸಪ್ತಾಹದ ಅಂಗವಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. * ಜಾಗೃತಿ ಮೂಡಿಸಿದ ವಿವಿಧ ಸಂಸ್ಥೆ ವನ್ಯಜೀವಿ ಸಪ್ತಾಹ : 2023ರ ಜನಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ಎನ್ನೆಸ್ಸೆಸ್ ಘಟಕಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಸ್ಥೆ ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಜಾಗೃತಿ ಮೂಡಿಸಿದವು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ