ಜೆಜೆಎಂ ಕಾಮಗಾರಿಗಳನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಪೂರ್ಣಗೊಳಿಸಿ: ಸಂಸದ ಡಾ. ಮಂಜುನಾಥ್

KannadaprabhaNewsNetwork | Published : May 8, 2025 12:32 AM
Follow Us

ಸಾರಾಂಶ

ನಕಾಶೆಯಲ್ಲಿದ್ದರೆ ರಸ್ತೆ ಬಿಡಿಸಬಹುದು. ನಕಾಶೆಯಲ್ಲಿಲ್ಲದ ರಸ್ತೆಗಳನ್ನು ಬಿಡಿಸಲು ತಹಸೀಲ್ದಾರ್‌ಗಳಿಗೆ ಅವಕಾಶವಿಲ್ಲ, ಈ ಬಗ್ಗೆ ನ್ಯಾಯಾಲಯದ ಆದೇಶವಾಗಬೇಕು, ಈ ಬಗ್ಗೆ ತಹಸೀಲ್ದಾರ್ ಕಚೇರಿಗಳಲ್ಲಿ ಸೂಚನಾ ಫಲಕ ಆಳವಡಿಸಲಾಗುವುದು. 90 ದಿನಗಳ ಬಳಿಕ ಯಾವುದೇ ಪ್ರಕರಣ ಉಳಿಸಿಕೊಳ್ಳುತ್ತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರು ಸಭೆಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನೀರು ಪೂರೈಸುವ ಅತ್ಯಂತ ಮಹತ್ವಪೂರ್ಣ ಯೋಜನೆಯಾದ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅವುಗಳನ್ನು ಪೂರ್ಣಗೊಳಿಸಲು ಅಗತ್ಯ ಕಮವಹಿಸುವಂತೆ ಸಂಸದ ಡಾ. ಸಿ.ಎನ್. ಮಂಜುನಾಥ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೆಎಂಎಂ ಯೋಜನೆಯಲ್ಲಿ ಇದೂವರೆಗೆ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ ಶೇಕಡ 55ರಷ್ಟು ಕಾಮಗಾರಿಗಳು ಮಾತ್ರ ಪೂರ್ಣಗೊಂಡಿವೆ, ಜಿಲ್ಲೆಯಾದ್ಯಂತ ಈ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವ ಅಗತ್ಯವಿದೆ. ಅದಕ್ಕಾಗಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒಗಳು ಜಿಲ್ಲೆಯ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮವಹಿಸಬೇಕು ಎಂದರು.

ಈ ಯೋಜನೆ ಇನ್ನೂ ಪೂರ್ಣಗೊಳ್ಳದಿರುವುದು ಸರಿಯಲ್ಲ. ಈ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯ ಕೊರತೆ ಇದ್ದರೆ ಸಿಬ್ಬಂದಿಯನ್ನು ನಿಯೋಜಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಹಾಗೂ ಫಲಾನುಭವಿಗಳಿಗೆ ಕುಡಿಯುವ ನೀರು ಒದಗಿಸುವಂತೆ ಅವರು ತಾಕಿತು ಮಾಡಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 989 ಕಾಮಗಾರಿ ಪೂರ್ಣಗೊಂಡಿದ್ದು, 600 ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಸಾಲಿನಲ್ಲಿ 3,923 ಕೋಟಿ ಅನುದಾನ ಬಿಡುಗಡೆಯಾಗಿದ್ದು 3,833 ಕೋಟಿ ವೆಚ್ಚವಾಗಿದೆ ಎಂದು ಕಾರ್ಯಪಾಲಕ ಅಭಿಯಂತರ ವೀರನಂಜೇಗೌಡ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಶೇ.64ರಷ್ಟು ಮಾತ್ರ ಕಾಮಗಾರಿ ಪೂರ್ಣಗೊಂಡಿದ್ದು, ಕಾಮಗಾರಿ ತೀರಾ ಹಿಂದುಳಿದಿದೆ. ಕನಕಪುರ ಮತ್ತು ಮಾಗಡಿಯಲ್ಲಿ ಶೇ 40ರಷ್ಟು ಮಾತ್ರ ಪ್ರಗತಿಯಾಗಿದೆ. ಎಲ್ಲಿ ಸಮಸ್ಯೆಯಾಗಿದೆ ಎಂಬುದನ್ನು ಗುರುತಿಸಿ. ಗುತ್ತಿಗೆದಾರರು, ಮೂರನೇ ವ್ಯಕ್ತಿ ಪರಿಶೀಲನೆಯಲ್ಲಿ ಸಮಸ್ಯೆ ಆಗಿದೆಯೇ ಎಂಬುದನ್ನು ಪರಿಶೀಲಿಸಬೇಕು, ಕಾಮಗಾರಿ ತಡ ಮಾಡುವ ಗುತ್ತಿಗೆದಾರರಿಗೆ ನೋಟಿಸ್ ನೀಡಿ, ಶೇ.10ರಷ್ಟು ದಂಡ ವಿಧಿಸುವಂತೆ ಅವರು ಸೂಚನೆ ನೀಡಿದರು.

ಅಂತರ್ಜಲ ಮರುಪೂರ್ಣ ವ್ಯವಸ್ಥೆ ರೂಪಿಸಿ:

ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಗೆ ಸಂಬಂಧಿಸಿದಂತೆ ಮಾತನಾಡಿದ ಸಂಸದರು, ಬೋರ್ ವೆಲ್ ಕೊರೆಯಿಸಿ ಅಳವಡಿಸುವಾಗಲೇ ಅವುಗಳಲ್ಲಿ ಅಂತರ್ಜಲ ಮರುಪೂರ್ಣ ವ್ಯವಸ್ಥೆ ರೂಪಿಸಬೇಕು, ಈ ರೀತಿಯ ಯೋಜನೆಗಳನ್ನು ಮುಂಬರುವ ದಿನಗಳಲ್ಲಿ ಅಳವಡಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು, ಜಿಲ್ಲೆಯಲ್ಲಿ 22 ಕಡೆ ಖಾಸಗಿ ಬೋರ್‌ವೆಲ್ ಹಾಕಲಾಗಿದೆ, 10 ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಹಾವು ಕಡಿತ ಪ್ರಕರಣಗಳಲ್ಲಿ ದೂರು ದಾಖಲಾಗುವವರೆಗೂ ಕಾಯಬಾರದು. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ನೀಡಬೇಕು, ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ನೇಮಕವಾಗಿದೆ. ಖಾಲಿ ಇರುವ ವೈದ್ಯರ ಹುದ್ದೆಯ ಭರ್ತಿಗೆ ವೈದ್ಯರ ಹಾಗೂ ನರ್ಸ್ಗಳ ವೇತನ ಹೆಚ್ಚಳ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಏಕ ವೈದ್ಯರಿರುವ ಆಸ್ಪತ್ರೆಗಳ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗಳಲ್ಲಿ ಭಾಗವಹಿಸಲು ಅನುಕೂಲ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕಿಸಾನ್ ಕಾಲ್ ಸೆಂಟರ್ ನಂಬರ್ ಬಗ್ಗೆ ಪ್ರಚಾರ ಮಾಡಬೇಕು, ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಉಚಿತವಾಗಿ ಮಾಹಿತಿ ನೀಡುವ 1800-4253553 ನಂಬರ್ ಆಗಿದ್ದು, ಈ ಬಗ್ಗೆ ರೈತರಿಗೆ ಹೆಚ್ಚಿನ ಪ್ರಚಾರ ಮಾಡುವಂತೆ ಸಂಸದರು ನಿರ್ದೇಶನ ನೀಡಿದರು.

ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿ:

ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಶೌಚಾಲಯಗಳನ್ನು ಪ್ರತಿ ದಿನ ಸ್ವಚ್ಛಗೊಳಿಸಬೇಕು. ಇದನ್ನು ಸಿಬ್ಬಂದಿ ಪರಿಶೀಲಿಸುತ್ತಿರಬೇಕು. ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಒಂದೊಂದು ಶೌಚಾಲಯಗಳಿದ್ದರೆ ಇನ್ನು ಎರಡು- ಮೂರು ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಮೀನು, ರುದ್ರಭೂಮಿಗೆ ದಾರಿ ಇಲ್ಲ ಎಂಬ ದೂರುಗಳಿವೆ, ಈ ಸಮಸ್ಯೆಗಳನ್ನು ಬಗೆಹರಿಸಲು ತಹಸೀಲ್ದಾರರು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು, ಸಾರ್ವಜನಿಕರು ನೇರವಾಗಿ ತಹಸೀಲ್ದಾರ್‌ಗಳನ್ನು ಭೇಟಿ ಮಾಡಿ, ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ತಹಸೀಲ್ದಾರರ ಹಂತದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದರು.

ನಕಾಶೆಯಲ್ಲಿದ್ದರೆ ರಸ್ತೆ ಬಿಡಿಸಬಹುದು. ನಕಾಶೆಯಲ್ಲಿಲ್ಲದ ರಸ್ತೆಗಳನ್ನು ಬಿಡಿಸಲು ತಹಸೀಲ್ದಾರ್‌ಗಳಿಗೆ ಅವಕಾಶವಿಲ್ಲ, ಈ ಬಗ್ಗೆ ನ್ಯಾಯಾಲಯದ ಆದೇಶವಾಗಬೇಕು, ಈ ಬಗ್ಗೆ ತಹಸೀಲ್ದಾರ್ ಕಚೇರಿಗಳಲ್ಲಿ ಸೂಚನಾ ಫಲಕ ಆಳವಡಿಸಲಾಗುವುದು. 90 ದಿನಗಳ ಬಳಿಕ ಯಾವುದೇ ಪ್ರಕರಣ ಉಳಿಸಿಕೊಳ್ಳುತ್ತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಗೂ ಮುನ್ನ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಮೃತ ಪಟ್ಟವರಿಗಾಗಿ ಮೌನಾಚರಣೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನ್ಮೋಲ್ ಜೈನ್, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಉಪಸ್ಥಿತರಿದ್ದರು.