ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ

KannadaprabhaNewsNetwork |  
Published : Mar 14, 2025, 01:30 AM IST

ಸಾರಾಂಶ

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರ ಜತೆ ಗುರುವಾರ ಅವರು ಸಂವಾದ ನಡೆಸಿದರು.

ಈ ವೇಳೆ ಕೆಲ ಹಿರಿಯ ವೈದ್ಯರು, ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷ ವ್ಯಯಿಸಿರಲಾಗಿರುತ್ತದೆ. ಆದರೆ 60ನೇ ವಯಸ್ಸಿನಲ್ಲಿ ನಿವೃತ್ತರಾಗುವುದರಿಂದ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸು ವಿಸ್ತರಿಸಲು ಸರ್ಕಾರ ಉತ್ಸುಕವಾಗಿದೆ ಎಂದು ಭರವಸೆ ನೀಡಿದರು.

ಉತ್ತಮ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ನಮ್ಮ ಅನುಭವಿ ವೈದ್ಯರ ಸೇವೆ ಸದುಪಯೋಗಪಡಿಸಿಕೊಳ್ಳಲು, ನಾನು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಷಯ ಚರ್ಚಿಸುತ್ತೇನೆ. ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿನ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.

ವಿಮೆ ಸೇವೆ, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು:

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ವೈದ್ಯರಿಗೆ ಗಮನಾರ್ಹ ಸೌಲಭ್ಯಗಳನ್ನು ಸಚಿವರು ಇದೇ ಸಂದರ್ಭದಲ್ಲಿ ಘೋಷಿಸಿದರು.

ಈ ವೈದ್ಯರು ಯಾವುದೇ ಸರ್ಕಾರಿ ವಿಮಾ ಯೋಜನೆಯಡಿ ಒಳಗೊಳ್ಳುವುದಿಲ್ಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಈಗಾಗಲೇ ಲಭ್ಯವಿರುವ ಜೀವನ ಸಂಜೀವಿನಿ ಎಂಬ ಯೋಜನೆ ಜಾರಿಗೆ ತರಲು ಯೋಜಿಸುತ್ತಿದೆ ಎಂದು ತಿಳಿಸಿದರು.

ವೈದ್ಯಕೀಯ ಮೂಲಸೌಕರ್ಯ ಮತ್ತಷ್ಟು ಬಲಪಡಿಸಲು, ಜಯದೇವ ಆಸ್ಪತ್ರೆಗೆ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಹೆಚ್ಚುವರಿ ಹಣ ಮಂಜೂರು ಮಾಡುತ್ತಿದೆ. ಜತೆಗೆ ಮಕ್ಕಳ ಹೃದಯ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಐದು ಹೆಚ್ಚುವರಿ ಆಪರೇಷನ್ ಥಿಯೇಟರ್‌ ಮಂಜೂರು ಮಾಡುತ್ತೇವೆ ಎಂದು ತಿಳಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ