ಕುಶಾಲನಗರ: ವಿದ್ಯಾರ್ಥಿಗಳು ನಿರಂತರ ಕಲಿಕೆ, ಸತತ ಅಭ್ಯಾಸ, ನಿರ್ದಿಷ್ಠ ಗುರಿ ಹಾಗೂ ಕಠಿಣ ಪರಿಶ್ರಮದಿಂದ ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಂದು ಜ್ಞಾನಗಂಗಾ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಟಿ.ಕೆ.ಸುಧೀರ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕ.ಸಾ.ಪ. ಮತ್ತು ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ದಿ. ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸ ನೀಡಿದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕ ಮೆ.ನಾ.ವೆಂಕಟನಾಯಕ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯದ ದೃಷ್ಟಿಯಿಂದ ಇಷ್ಟಪಟ್ಟು ಓದಬೇಕೇ ಹೊರತು ಕಷ್ಟಪಟ್ಟು ಓದಬಾರದು ಎಂದರು.ಸನ್ಮಾನ: 2025-26 ನೇ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಶೇ.98.77 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ಶನಿವಾರಸಂತೆಯ ವಿಘ್ನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ನವ್ಯ ಎಚ್.ಕೆ. ಅವರನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಜ್ಞಾನಗಂಗಾ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ, ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ಕ.ಸಾ.ಪ.ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್, ಎಸ್.ಬಿ.ಐ.ಬ್ಯಾಂಕ್ ನ ನಿವೃತ್ತ ಹಿರಿಯ ವ್ಯವಸ್ಥಾಪಕಿ ಸೂದನ ರತ್ನಾವತಿ ಮಾತನಾಡಿದರು. ತಾಲೂಕು ಕ.ಸಾ.ಪ.ಕೋಶಾಧಿಕಾರಿ ಕೆ.ವಿ.ಉಮೇಶ್, ಪ್ರಾಂಶುಪಾಲರಾದ ಜೆ.ಎ.ಸಂಜನಿ ಶಾಲಾ ಶಿಕ್ಷಕ, ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಇದ್ದರು.