ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕಳೆದ ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ಎಂ.ಡಿ., ಸಂತೋಷ್ ಶೆಟ್ಟಿ, ಜಯಂತ ಟಿ., ಅಜಯ್ ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆಯನ್ನು ಉಪಯೋಗಿಸಿ ವಿಡಿಯೋ ತಯಾರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ. ಇದು ಖಂಡನೀಯ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ್ರೀ ಕ್ಷೇತ್ರದ ಕೋಟ್ಯಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಯು ಸಮಾಜದಲ್ಲಿ ಉದ್ವಿಗ್ನತೆ ಮತ್ತು ಶಾಂತಿಭಂಗಕ್ಕೆ ಕಾರಣವಾಗುತ್ತದೆ ಎಂದರು.ಅನಾಮಿಕ ವ್ಯಕ್ತಿಯೋರ್ವ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರಕಾರವು ’ವಿಶೇಷ ತನಿಖಾ ತಂಡ’ವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಗೌರವದಿಂದ ಸ್ವಾಗತಿಸುತ್ತೇವೆ. ಆದರೆ ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಭಕ್ತರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ ಎಂದರು.
ಕು. ಸೌಜನ್ಯಾಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ದಾಳಿಗೆ ಹೊರಟ ಈ ತಂಡ ಷಡ್ಯಂತ್ರ ಹಾಗೂ ಅಪಪ್ರಚಾರ ಮಾಡುತ್ತಿರುವುದರ ಹಿನ್ನೆಲೆ ಏನು, ಸುಳ್ಳು ಆರೋಪ ಮಾಡಲು ಪ್ರಚೋದಿಸುತ್ತಿರುವವರು ಯಾರು ಈ ತಂಡಕ್ಕೆ ಹಣಕಾಸಿನ ನೆರವು ಎಲ್ಲಿಂದ ಬರುತ್ತಿದೆ ಎಂಬುದನ್ನು ತಿಳಿಯಲು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚಂದ್ರ, ಪ್ರಣಯ್, ಚಿಕ್ಕರಾಜು, ಕಾಗಲವಾಡಿ ಚಂದ್ರು, ಮಹೇಂದ್ರ, ಪ್ರಕಾಶ್, ರಾಜೇಂದ್ರ, ಹೂರದಳ್ಳಿ ಪ್ರಸಾದ್, ಬಾಲಸುಬ್ರಹ್ಮಣ್ಯಂ, ಮಮತಾ, ವೆಂಕಟರಂಗಸ್ವಾಮಿ, ವೃಷಬೇಂದ್ರ, ಬಿ.ಕೆ. ರವಿಕುಮಾರ್, ವಿರಾಟ್ ಶಿವು, ಹರೀಶ್ ಕುಮಾರ್ ಹಾಗೂ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಸಿಬ್ಬಂದಿಗಳು, ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.